ಬೆಂಗಳೂರು: ಐಷಾರಾಮಿ ಲ್ಯಾಂಬೊರ್ಗಿನಿ ಕಾರಿಗೆ ನಕಲಿ ಫ್ಯಾನ್ಸಿ ನಂಬರ್ ಪ್ಲೇಟ್ ಅಳವಡಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದಲ್ಲಿ, ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ವಿರುದ್ಧ ಆತುರದ ಕ್ರಮ ಕೈಗೊಳ್ಳಬಾರದು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರು ಮತ್ತು ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ರಿಕ್ಕಿ ರೈ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸಾರಿಗೆ ಪ್ರಾಧಿಕಾರದಿಂದ ಫ್ಯಾನ್ಸಿ ನಂಬರ್ ಮಾನ್ಯವಾಗಿ ನೀಡಲಾಗಿದ್ದು, ಅದಕ್ಕಾಗಿ ರಿಕ್ಕಿ ರೈ ನಾಲ್ಕು ಲಕ್ಷ ರೂಪಾಯಿ ಪಾವತಿಸಿರುವುದಕ್ಕೆ ದಾಖಲೆಗಳಿವೆ ಎಂದು ತಿಳಿಸಿದರು. ಆದ್ದರಿಂದ ನಕಲಿ ನಂಬರ್ ಪ್ಲೇಟ್ ಬಳಕೆ ಆರೋಪ ಅನ್ವಯಿಸುವುದಿಲ್ಲ ಎಂದು ವಾದಿಸಿದರು.
ಇನ್ನೂ, ಲ್ಯಾಂಬೊರ್ಗಿನಿ ಕಾರು ರಸ್ತೆ ಮೇಲೆ ಸದ್ದು ಮಾಡುತ್ತಾ ಹೋಗುತ್ತಿರುವುದರಿಂದ ಕಿರಿಕಿರಿಗೆ ಒಳಗಾದ ವ್ಯಕ್ತಿಯೊಬ್ಬರು ವಿಡಿಯೋ ಚಿತ್ರೀಕರಿಸಿದ್ದರಿಂದ ಪ್ರಕರಣ ದಾಖಲಾಗಿದೆ. ಮೋಟಾರ್ ವಾಹನ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ದಂಡ ಕಟ್ಟಲು ನ್ಯಾಯಾಲಯಕ್ಕೆ ಹೋಗಲು ಸಿದ್ಧತೆ ಇದೆ. ಹೀಗಿರುವಾಗ ಎರಡನೇ ಎಫ್‌ಐಆರ್ ದಾಖಲಿಸುವ ಅಗತ್ಯವಿಲ್ಲ ಎಂದು ವಕೀಲರು ತಿಳಿಸಿದರು.
ಇದಕ್ಕೆ ಪ್ರತಿಯಾಗಿ ಸರ್ಕಾರದ ಪರ ವಕೀಲರು, ರಿಕ್ಕಿ ರೈ ಖರೀದಿಸಿರುವ ವಾಹನಕ್ಕೆ ಫ್ಯಾನ್ಸಿ ನಂಬರ್ ಅಧಿಕೃತವಾಗಿ ಹಂಚಿಕೆ ಮಾಡಲಾಗಿಲ್ಲ ಎಂದು ವಾದಿಸಿದರು. ದೆಹಲಿಯಲ್ಲಿ ವಾಹನ ಖರೀದಿಸಿ, ಬೆಂಗಳೂರಿನಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸದೇ ಇಂತಹ ನಂಬರ್ ಪ್ಲೇಟ್ ಬಳಕೆ ಮಾಡಿರುವುದು ವಂಚನೆ ಹಾಗೂ ದಾಖಲೆ ತಿರುಚಿದ ಪ್ರಕರಣವಾಗುತ್ತದೆ ಎಂದು ಹೇಳಿದರು.
ಇರುವ ಎರಡೂ ವಾದಗಳನ್ನು ಆಲಿಸಿದ ನ್ಯಾಯಾಲಯ, ಪ್ರಕರಣದ ತನಿಖೆಗೆ ರಿಕ್ಕಿ ರೈ ಸಹಕರಿಸಬೇಕು ಎಂದು ಸೂಚಿಸಿತು. ಜೊತೆಗೆ ತನಿಖೆ ನೆಪದಲ್ಲಿ ಪೊಲೀಸರು ತ್ವರಿತ ಅಥವಾ ಕಠಿಣ ಕ್ರಮ ಕೈಗೊಳ್ಳಬಾರದು ಎಂದು ತಿಳಿಸಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿತು.



