ಕೋಲಾರ: ರಾಜ್ಯದಲ್ಲಿ ಈಜಲು ಹೋಗಿ ನೀರುಪಾಲಾಗುವ ಘಟನೆಗಳು ಹೆಚ್ಚುತ್ತಿರುವ ನಡುವೆ, ಎಸ್‌ಎಸ್‌ಎಲ್‌ಸಿ ಫಲಿತಾಂಶದ ಖುಷಿಯಲ್ಲಿದ್ದ ಬಾಲಕನೋರ್ವ ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಕೋಲಾರದಲ್ಲಿ ನಡೆದಿದೆ.
ಮೃತ ಬಾಲಕನನ್ನು ಕಿರಣ್ (15) ಎಂದು ಗುರುತಿಸಲಾಗಿದ್ದು, ಆತ ಮುಳಬಾಗಿಲು ತಾಲೂಕಿನ ನಿವಾಸಿ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 239 ಅಂಕಗಳನ್ನು ಪಡೆದು ತೇರ್ಗಡೆಯಾದ ಖುಷಿಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದನು.
ಈ ವೇಳೆ ಈಜಲು ಬಾರದ ಕಾರಣ ಬಾವಿಯ ನೀರಲ್ಲಿ ಮುಳುಗಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಾಲಕನ ಶವಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.
ಈ ಘಟನೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.



