ತುಮಕೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸುವ ಸಾಧ್ಯತೆ ಇದೆ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಅಭಿಪ್ರಾಯಪಟ್ಟಿದ್ದಾರೆ.
ಕಾಂಗ್ರೆಸ್ ಸರ್ಕಾರದೊಳಗಿನ ಆಂತರಿಕ ಕಲಹ ಮುಂದುವರಿದರೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವ ಪರಿಸ್ಥಿತಿ ಉಂಟಾದರೂ ಅಚ್ಚರಿಯಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ನಡುವಿನ ಶೀತಲ ಸಮರವನ್ನು ಉಲ್ಲೇಖಿಸಿದ ಸುರೇಶ್ ಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವಿನ ರಾಜಕೀಯ ಬೆಳವಣಿಗೆಗಳು ಸರ್ಕಾರವನ್ನು ಸಂಕಷ್ಟಕ್ಕೆ ತಳ್ಳುತ್ತಿವೆ ಎಂದು ಆರೋಪಿಸಿದರು.
ಸಿಎಂ ಹುದ್ದೆಗಾಗಿ ಕಾಂಗ್ರೆಸ್‌ನ ಹಿರಿಯ ನಾಯಕರ ನಡುವೆ ಪೈಪೋಟಿ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ಡಾ. ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ ಮತ್ತು ಎಂ.ಬಿ. ಪಾಟೀಲ್ ಮುಖ್ಯಮಂತ್ರಿಯಾಗಲು ಆಸಕ್ತಿ ತೋರಿದ್ದಾರೆ. ಡಿ.ಕೆ. ಶಿವಕುಮಾರ್ ಈಗಾಗಲೇ ಸಿಎಂ ಆಗಲು ತಯಾರಿ ನಡೆಸುತ್ತಿದ್ದು, ಮೇ 10ರಂದು ಮುಹೂರ್ತವೂ ನಿಗದಿಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
ರಾಜ್ಯ ಸರ್ಕಾರದ ಆಡಳಿತ ವೈಖರಿಯಿಂದ ಜನರು ಅಸಮಾಧಾನಗೊಂಡಿದ್ದಾರೆ. ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ಅಧಿಕಾರ ಉಳಿಸಿಕೊಳ್ಳುವ ರಾಜಕೀಯವೇ ನಡೆಯುತ್ತಿದೆ. ಕಾಂಗ್ರೆಸ್ ಒಳಜಗಳದಿಂದ ಆಡಳಿತ ವ್ಯವಸ್ಥೆಯ ಮೇಲೆ ಪರಿಣಾಮ ಬಿದ್ದಿದೆ ಎಂದು ಆರೋಪಿಸಿದರು.
ಇದೇ ವೇಳೆ, ಈಗಲೇ ಚುನಾವಣೆ ನಡೆದರೆ ಬಿಜೆಪಿ-ಜೆಡಿಎಸ್ ಮೈತ್ರಿ ಭರ್ಜರಿ ಗೆಲುವು ಸಾಧಿಸಲಿದೆ. 175ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಸುರೇಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.



