ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಡಿವಾಳ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಡಿವಾಳದ ಖಾಸಗಿ ಕೃಪಾನಿಧಿ ಕಾಲೇಜಿನಲ್ಲಿ ನಡೆದ ಸಿಇಟಿ ಪರೀಕ್ಷೆ ಸಂದರ್ಭದಲ್ಲಿ ಮೂವರು ವಿದ್ಯಾರ್ಥಿಗಳಿಗೆ ಜನಿವಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಜನಿವಾರ ತೆಗೆದು ಪರೀಕ್ಷೆ ಬರೆಯಬೇಕು ಅಥವಾ ಮನೆಗೆ ತೆರಳಬೇಕು ಎಂದು ಸಿಬ್ಬಂದಿ ಸೂಚಿಸಿದ ಹಿನ್ನೆಲೆ ವಿದ್ಯಾರ್ಥಿಗಳು ಜನಿವಾರ ತೆಗೆದು ಪರೀಕ್ಷೆ ಬರೆದಿದ್ದಾರೆ ಎಂದು ತಿಳಿದುಬಂದಿದೆ.
ಈ ಘಟನೆ ಕುರಿತು ವಿದ್ಯಾರ್ಥಿ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಪರೀಕ್ಷಾ ಪರಿವೀಕ್ಷಕರಾದ ಸರಿತಾ, ಗಿರಿಜಮ್ಮ ಹಾಗೂ ಪರೀಕ್ಷಾ ಕೇಂದ್ರದ ಉಸ್ತುವಾರಿ ಸುಧಾಕರ್ ಅವರನ್ನು ಬಂಧಿಸಲಾಗಿದೆ.
ಬಿಎನ್‌ಎಸ್ 299, 302 ಹಾಗೂ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪರೀಕ್ಷಾ ಕೇಂದ್ರದಲ್ಲಿ ನಡೆದ ಈ ಘಟನೆ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ.



