ಉಡುಪಿ: ನಗರದ ಪ್ರಮುಖ ವಾಣಿಜ್ಯ ಪ್ರದೇಶವಾದ ಸಿಟಿ ಬಸ್ ನಿಲ್ದಾಣದ ಸಮೀಪದಲ್ಲಿರುವ ‘ಖಾದರ್ ಕಮರ್ಷಿಯಲ್’ ಸಂಕೀರ್ಣದಲ್ಲಿ ಇಂದು ಭಾರಿ ಅಗ್ನಿ ಅವಘಡ ಸಂಭವಿಸಿದೆ.
ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಕಟ್ಟಡದೊಳಗೆ ವ್ಯಾಪಿಸಿ ವ್ಯಾಪಾರಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.
ಮೊದಲು ಹಾರ್ಡ್ವೇರ್ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿದ್ದ ಸುಡುವ ಪದಾರ್ಥಗಳಿಂದಾಗಿ ಅಗ್ನಿ ವೇಗವಾಗಿ ಹರಡಿದೆ. ನಂತರ ಪಕ್ಕದ ಮೊಬೈಲ್ ಅಂಗಡಿಗೂ ಬೆಂಕಿ ತಗುಲಿದ್ದು, ಅಂಗಡಿಗಳಲ್ಲಿದ್ದ ಬೆಲೆಬಾಳುವ ಹ್ಯಾಂಡ್ಸೆಟ್ಗಳು ಹಾಗೂ ಹಾರ್ಡ್ವೇರ್ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ದಟ್ಟ ಹೊಗೆ ಇಡೀ ಪ್ರದೇಶವನ್ನು ಆವರಿಸಿಕೊಂಡು ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆಯೇ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಎರಡು ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದರು. ಜನನಿಬಿಡ ಪ್ರದೇಶವಾದ ಕಾರಣ ಕಾರ್ಯಾಚರಣೆ ಸವಾಲಾಗಿದ್ದರೂ, ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಈ ಅವಘಡ ಸಂಭವಿಸಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.
ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿರುವುದರಿಂದ ವ್ಯಾಪಾರಿಗಳಿಗೆ ಭಾರೀ ನಷ್ಟವಾಗಿದೆ.



