ಬೆಂಗಳೂರು: ನಗರದ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜನವರಿಯಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿನಿಯರ ಪ್ರಕರಣವನ್ನು ರಾಜ್ಯ ಸರ್ಕಾರ ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ವರ್ಗಾವಣೆ ಮಾಡಿದೆ. ಘಟನೆ ನಡೆದು ಎಂಟು ತಿಂಗಳು ಕಳೆದರೂ ವಿದ್ಯಾರ್ಥಿನಿಯರ ಬಗ್ಗೆ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತನಿಷ್ಕಾ ಹಾಗೂ ಆಕೆಯ ಜೂನಿಯರ್ ತೇಜಸ್ವಿನಿ ಜನವರಿ 31ರಂದು ಮನೆಯಿಂದ ಹೊರಟ ಬಳಿಕ ನಿಗೂಢವಾಗಿ ನಾಪತ್ತೆಯಾಗಿದ್ದರು. ಅವರು ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ತನಿಖೆಯಲ್ಲಿ ವಿದ್ಯಾರ್ಥಿನಿಯರು ಮನೆ ಬಿಟ್ಟು ಹೋಗುವಾಗ ತಮ್ಮ ಆಧಾರ್ ಕಾರ್ಡ್‌ಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗಿದ್ದರೆಂಬುದು ಬೆಳಕಿಗೆ ಬಂದಿತ್ತು. ಆದರೆ, ಕಳೆದ ಎಂಟು ತಿಂಗಳ ಅವಧಿಯಲ್ಲಿ ಅವರು ಯಾವುದೇ ಮೊಬೈಲ್ ಫೋನ್ ಅಥವಾ ಎಟಿಎಂ ಕಾರ್ಡ್ ಬಳಸಿಲ್ಲ ಎಂಬುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಜೊತೆಗೆ, ಕುಟುಂಬ ಸದಸ್ಯರು ಅಥವಾ ಸ್ನೇಹಿತರನ್ನು ಸಹ ಸಂಪರ್ಕಿಸಿಲ್ಲ.
ಪ್ರಕರಣ ದಾಖಲಾದ ತಕ್ಷಣ ಪೊಲೀಸರು ತನಿಖೆ ಆರಂಭಿಸಿ, ಆರಂಭಿಕ ಹಂತದಲ್ಲಿ ವಿದ್ಯಾರ್ಥಿನಿಯರು ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ಸುಳಿವು ಪತ್ತೆಹಚ್ಚಿದ್ದರು. ಬಳಿಕ ಮುಂಬೈ, ಚೆನ್ನೈ, ಕೊಯಮತ್ತೂರು, ದೆಹಲಿ, ಕಾಶಿ, ಕೇರಳ, ಚಾಮರಾಜನಗರ ಮತ್ತು ಮೈಸೂರು ಸೇರಿದಂತೆ ದೇಶದ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಹುಡುಕಾಟ ನಡೆಸಲಾಗಿತ್ತು. ಆದರೂ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಲಿಲ್ಲ.
ಸ್ಥಳೀಯ ಪೊಲೀಸರ ತನಿಖೆಯಿಂದ ಅಸಮಾಧಾನಗೊಂಡ ಪೋಷಕರು ಹೈಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ನಂತರ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸಿದ್ದರು. ಇದೀಗ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿದ್ದು, ವಿದ್ಯಾರಣ್ಯಪುರ ಪೊಲೀಸರು ಸಂಬಂಧಿತ ಎಲ್ಲಾ ದಾಖಲೆಗಳು ಮತ್ತು ಪ್ರಮುಖ ಮಾಹಿತಿಯನ್ನು ಸಿಐಡಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
ಪ್ರಕರಣದ ತನಿಖೆಯನ್ನು ಸಿಐಡಿಯ ವಿಶೇಷ ತಂಡ ಕೈಗೆತ್ತಿಕೊಂಡಿದ್ದು, ನಾಪತ್ತೆಯಾದ ವಿದ್ಯಾರ್ಥಿನಿಯರ ಪತ್ತೆಗೆ ಹೊಸ ದಿಕ್ಕಿನಲ್ಲಿ ತನಿಖೆ ಆರಂಭಿಸಿದೆ.



