ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಅಕ್ರಮ ಭ್ರೂಣಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಖಾಸಗಿ ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ.
ಪಟ್ಟಣದ ಚೇತನಾ ನರ್ಸಿಂಗ್ ಹೋಮ್‌ನ ವೈದ್ಯೆ ಡಾ. ದಿವ್ಯಾ, ನಾವಿ ಡಯಾಗ್ನಸ್ಟಿಕ್ ಸೆಂಟರ್‌ನ ವೈದ್ಯ ಡಾ. ಹರ್ಷಿತ್ ಹಾಗೂ ಕುಶಾಲ್ ಡಯಾಗ್ನಸ್ಟಿಕ್ ಸೆಂಟರ್‌ನ ಡಾ. ಪರೀಶ್ ಬಂಧಿತರಾಗಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಕರಣ ಸಂಬಂಧ 31 ಬಾಲಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ನಡೆಸಿರುವ ಆರೋಪ ಕೇಳಿಬಂದಿದ್ದು, ಇದೇ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಇದೇ ವೇಳೆ ಕೆ.ಆರ್.ಪೇಟೆ ಸರ್ಕಾರಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಪ್ರಿಯಾಂಕಾ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಒಟ್ಟು 17 ಆರೋಪಿಗಳ ವಿರುದ್ಧ 12 ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಸರ್ಕಾರಿ ವೈದ್ಯೆ, ಮೂವರು ಖಾಸಗಿ ವೈದ್ಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆ ಹಾಗೂ ಕೆಲವು ಖಾಸಗಿ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಲೋಕಾಯುಕ್ತ ಸಂಸ್ಥೆಯೂ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ.
ಇತ್ತೀಚೆಗೆ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯಲ್ಲಿ ಕೆ.ಆರ್.ಪೇಟೆಯ ಎರಡು ಖಾಸಗಿ ಡಯಾಗ್ನಸ್ಟಿಕ್ ಸೆಂಟರ್‌ಗಳಲ್ಲಿ ಅಕ್ರಮ ಭ್ರೂಣಲಿಂಗ ಪತ್ತೆಗಾಗಿ ಸ್ಕ್ಯಾನಿಂಗ್ ನಡೆಸಿರುವುದು ಬೆಳಕಿಗೆ ಬಂದಿತ್ತು.
ಪರಿಶೀಲನೆ ವೇಳೆ ನಾವಿ ಡಯಾಗ್ನಸ್ಟಿಕ್ ಸೆಂಟರ್‌ನಲ್ಲಿ 2024ರಲ್ಲಿ 19 ಮತ್ತು 2025ರಲ್ಲಿ 5 ಸೇರಿದಂತೆ ಒಟ್ಟು 24 ಬಾಲಗರ್ಭಿಣಿಯರಿಗೆ ಸ್ಕ್ಯಾನಿಂಗ್ ನಡೆಸಿರುವುದು ಪತ್ತೆಯಾಗಿದೆ. ಇದೇ ವೇಳೆ ಕುಶಾಲ್ ಡಯಾಗ್ನಸ್ಟಿಕ್ ಸೆಂಟರ್‌ನಲ್ಲೂ 7 ಬಾಲಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್ ಮಾಡಿರುವ ಆರೋಪ ಕೇಳಿಬಂದಿದೆ.
ಸಾರ್ವಜನಿಕರಿಂದ ಬಂದ ದೂರು ಆಧರಿಸಿ ಉಪ ಲೋಕಾಯುಕ್ತ ಬಿ. ವೀರಪ್ಪ ತನಿಖೆಗೆ ಆದೇಶಿಸಿದ್ದರು. ಅವರ ಸೂಚನೆಯ ಮೇರೆಗೆ ಲೋಕಾಯುಕ್ತ ಪೊಲೀಸರು ಏಪ್ರಿಲ್ 17ರಂದು ಜಿಲ್ಲೆಯ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಕೆ.ಆರ್.ಪೇಟೆಯ ಖಾಸಗಿ ಡಯಾಗ್ನಸ್ಟಿಕ್ ಸೆಂಟರ್‌ಗಳ ಅಕ್ರಮ ಚಟುವಟಿಕೆಗಳು ಬಯಲಾಗಿದ್ದವು.
ಆರೋಗ್ಯ ಇಲಾಖೆ ಅಧಿಕಾರಿಗಳ ದೂರಿನ ಆಧಾರದ ಮೇಲೆ ಬಂಧಿತರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ-2023ರ ಕಲಂ 65(1), 64(2)(ಎಂ), 376(2)(ಎನ್) ಹಾಗೂ ಪೋಕ್ಸೋ ಕಾಯ್ದೆ-2017ರ ಸೆಕ್ಷನ್ 6 ಮತ್ತು 21ರಡಿ ಒಟ್ಟು 12 ಪ್ರಕರಣಗಳನ್ನು ದಾಖಲಿಸಲಾಗಿದೆ.



