ಬೆಂಗಳೂರು: ನಗರದಲ್ಲಿನ ಸುಮನಹಳ್ಳಿ ಫ್ಲೈ ಓವರ್ ಮೇಲೆ ಸರಣಿ ಅಪಘಾತ ಸಂಭವಿಸಿದ್ದು, ಕಾರು ಹಾಗೂ ಲಾರಿ ಸೇರಿದಂತೆ 7 ರಿಂದ 8 ವಾಹನಗಳು ಪರಸ್ಪರ ಡಿಕ್ಕಿಯಾದ ಘಟನೆ ನಡೆದಿದೆ.
ಅಪಘಾತದಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.
ಮಳೆಯ ಕಾರಣದಿಂದ ಫ್ಲೈ ಓವರ್ ಮೇಲೆ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ರಸ್ತೆ ಮೇಲೆ ಬಿದ್ದಿರುವ ವಾಹನಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರಿದಿದೆ.
ಇದೇ ವೇಳೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದ್ದು, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಳೆಯ ಸಮಯದಲ್ಲಿ ವಾಹನ ಸವಾರರು ಹೆಚ್ಚು ಎಚ್ಚರಿಕೆಯಿಂದ ಚಾಲನೆ ಮಾಡಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.



