ಬೆಂಗಳೂರು: ನಗರದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳು ಹಾಗೂ ಕಾಂಪೌಂಡ್ ಗೋಡೆಗಳ ಸಾಮರ್ಥ್ಯ ಪರಿಶೀಲನೆ ನಡೆಸುವಂತೆ ಸಂಬಂಧಿತ ಇಲಾಖೆಗಳಿಗೆ ಸೂಚನೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಬೌರಿಂಗ್ ಆಸ್ಪತ್ರೆಯಲ್ಲಿ ಕಾಂಪೌಂಡ್ ಗೋಡೆ ಕುಸಿದು ಸಂಭವಿಸಿದ ಅವಘಡದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳಿಗೆ ಈ ಮಾಹಿತಿ ನೀಡಿದರು.
ಭವಿಷ್ಯದಲ್ಲಿ ಇಂತಹ ಅವಘಡಗಳು ಮರುಕಳಿಸದಂತೆ ಬೌರಿಂಗ್, ವಿಕ್ಟೋರಿಯಾ, ಕೆ.ಸಿ. ಜನರಲ್ ಹಾಗೂ ಸಿ.ವಿ. ರಾಮನ್ ನಗರ ಆಸ್ಪತ್ರೆ ಸೇರಿದಂತೆ ನಗರದ ಎಲ್ಲ ಸರ್ಕಾರಿ ಆಸ್ಪತ್ರೆಗಳ ಹಳೆಯ ಕಟ್ಟಡಗಳು ಮತ್ತು ಕಾಂಪೌಂಡ್ ಗೋಡೆಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಲೋಕೋಪಯೋಗಿ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದು ಹೇಳಿದರು.
ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಪಾಲಿಕೆಯ ಮುಖ್ಯ ಎಂಜಿನಿಯರ್‌ಗೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.
ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಜೊತೆಗೆ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಸರ್ಕಾರದಲ್ಲಿ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತವೆ ಎಂದು ಪುನರುಚ್ಚರಿಸಿದ ಅವರು, ಜನರ ಸುರಕ್ಷತೆಗೆ ಆದ್ಯತೆ ನೀಡಲಾಗುವುದು ಎಂದರು.



