ಕೊಪ್ಪಳ: ಜಿಲ್ಲೆಯ ಗಂಗಾವತಿನಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ ಕುರುಬರ್ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯ ಗಂಭೀರ ತೀರ್ಪು ನೀಡಿದೆ.
ಗಂಗಾವತಿ ಹೆಚ್ಚುವರಿ ಸತ್ರ ನ್ಯಾಯಾಲಯ ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ್ದು, ಪ್ರತಿಯೊಬ್ಬರಿಗೂ 3 ಲಕ್ಷ ರೂ. ದಂಡ ವಿಧಿಸಿದೆ.
ಮಾರುತಿ ಕೊಲೆ ಪ್ರಕರಣದಲ್ಲಿ ಸಾಕ್ಷಿಯಾಗಿದ್ದ ಕಾರಣಕ್ಕೆ ವೆಂಕಟೇಶನನ್ನು ಗುರಿಯಾಗಿಸಿ ಪೂರ್ವ ಯೋಜಿತವಾಗಿ ಹತ್ಯೆ ಮಾಡಲಾಗಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಸಿಸಿಟಿವಿ ಸಾಕ್ಷ್ಯಗಳು ಹಾಗೂ ಆರೋಪಿಗಳ ಹಿಂದಿನ ಅಪರಾಧ ಚರಿತ್ರೆ ತೀರ್ಪಿನಲ್ಲಿ ಪ್ರಮುಖ ಪಾತ್ರ ವಹಿಸಿದೆ.
ಅಕ್ಟೋಬರ್ 8ರ ರಾತ್ರಿ ಕಾರಿನಲ್ಲಿ ಹಿಂಬಾಲಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿದ ಬಳಿಕ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ವೆಂಕಟೇಶನನ್ನು ಕೊಲೆ ಮಾಡಲಾಗಿತ್ತು.
ಈ ಪ್ರಕರಣವನ್ನು ಸವಾಲಿನ ಪ್ರಕರಣವೆಂದು ಪರಿಗಣಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಚಾರ್ಜ್‌ಶೀಟ್ ಸಲ್ಲಿಸಿದ್ದು, ಇದೀಗ ಕೋರ್ಟ್ ತೀರ್ಪಿನಿಂದ ಪ್ರಕರಣಕ್ಕೆ ತಿರುವು ಸಿಕ್ಕಿದೆ.



