ಬೆಂಗಳೂರು: ಸಿಟಿಇ ಪರೀಕ್ಷೆಯ ವೇಳೆ ವಸ್ತ್ರಸಂಹಿತೆ ಸಂಬಂಧ ಉಂಟಾದ ಗೊಂದಲದಿಂದ ತೊಂದರೆಗೊಳಗಾದ ಪರೀಕ್ಷಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ವರು ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಸಮಸ್ಯೆ ಎದುರಿಸಿದ್ದು, ಅವರಿಗೆ ಮಾತ್ರ ಮರು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಜನಿವಾರ ಹಾಗೂ ಹಿಜಾಬ್ ಸಂಬಂಧ ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದ ಎರಡು ಪರೀಕ್ಷಾ ಕೇಂದ್ರಗಳಲ್ಲಿ ಗೊಂದಲ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷಾರ್ಥಿಗಳು ಮರು ಪರೀಕ್ಷೆಗೆ ಅವಕಾಶ ನೀಡುವಂತೆ ಮನವಿ ಸಲ್ಲಿಸಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ತೊಂದರೆ ಅನುಭವಿಸಿದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುವಂತೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಪರೀಕ್ಷಾ ಗೊಂದಲಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡುವುದು ಸಮಂಜಸವಲ್ಲ. ಹೀಗಾಗಿ ಮರು ಪರೀಕ್ಷೆ ನಡೆಸುವುದು ಸೂಕ್ತ ಕ್ರಮ ಎಂದು ಸರ್ಕಾರ ನಿರ್ಧರಿಸಿದೆ ಎಂದರು.
ಈ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಕಳೆದ ಬಾರಿಯೂ ಇಂತಹ ಗೊಂದಲ ಉಂಟಾಗಿತ್ತು. ಈ ಬಾರಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮರು ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಸಚಿವ ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.



