ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕಾವೇರಿ ಎಂಬವರು ನೀಡಿದ ದೂರು ಆಧಾರವಾಗಿ ಬೆಂಗಳೂರಿನ ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ದೂರಿನ ಪ್ರಕಾರ, ಗಿರೀಶ್ ಮಟ್ಟಣ್ಣನವರ್ ಅವರು ಯೂಟ್ಯೂಬ್ ಚಾನೆಲ್ ಮೂಲಕ ಧರ್ಮಸ್ಥಳ ಹಾಗೂ ಕ್ಷೇತ್ರದಲ್ಲಿ ಮದುವೆಯಾದ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹೇಳಿಕೆಗಳಿಂದ ಧಾರ್ಮಿಕ ಭಾವನೆಗಳಿಗೆ ಹಾಗೂ ಮಹಿಳೆಯರ ಗೌರವಕ್ಕೆ ಧಕ್ಕೆ ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಾಹಿತಿಯಂತೆ, 2023ರ ಡಿಸೆಂಬರ್ 4ರಂದು ಉಜಿರೆಯಲ್ಲಿ ನಡೆದ ‘ಜನಾಂದೋಲ’ ಕಾರ್ಯಕ್ರಮದಲ್ಲಿ ಗಿರೀಶ್ ನೀಡಿದ ಭಾಷಣದ ವಿಡಿಯೋವನ್ನು ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗಿತ್ತು.
ಈ ಹಿನ್ನೆಲೆಯಲ್ಲಿ ದೂರು ದಾಖಲಿಸಿಕೊಂಡ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.



