ಗದಗ: ಜಾತ್ರೆಯಲ್ಲಿ ಸಂಭವಿಸಿದ ದುರ್ಘಟನೆಗೆ ಜಿಲ್ಲಾಡಳಿತದ ನಿರ್ಲಕ್ಷವೇ ಮುಖ್ಯ ಕಾರಣ ಎಂದು ಸಾಮಾಜಿಕ ಮಾಹಿತಿ ಹಕ್ಕುಗಳ ಹೋರಾಟಗಾರ ವಿನೋದ ಶಿದ್ಲಿಂಗ್ ಆರೋಪಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಾತ್ರೆಯಲ್ಲಿ ಅಪಾಯ ಸಂಭವಿಸುವ ಬಗ್ಗೆ ಮೊದಲೇ ಎಚ್ಚರಿಕೆ ನೀಡಿದ್ದರೂ, ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ ವಹಿಸಿದೆ ಎಂದು ಕಿಡಿಕಾರಿದ್ದಾರೆ.
ಜಾತ್ರೆಯನ್ನು ನಡೆಸುತ್ತಿರುವ ಆಯೋಜಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಘಟನೆಗೆ ಹೊಣೆಗಾರರಾದವರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಗಾಯಗೊಂಡವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ಅವಘಡಕ್ಕೆ ಕಾರಣವಾದ ಯಂತ್ರೋಪಕರಣಗಳನ್ನು ಬಳಕೆ ಮಾಡಿದವರ ಮೇಲೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಮುಂದೆ ಇಂತಹ ದುರ್ಘಟನೆಗಳು ನಡೆಯದಂತೆ, ಜಾತ್ರೆಗಳಿಗೆ ಕೇವಲ ಮನೆ ಉಪಯೋಗದ ವಸ್ತುಗಳ ಮಾರಾಟಕ್ಕೆ ಮಾತ್ರ ಅನುಮತಿ ನೀಡಬೇಕು. ಜನರ ಪ್ರಾಣಕ್ಕೆ ಅಪಾಯ ಉಂಟುಮಾಡುವಂತಹ ಆಟೋಟಗಳಿಗೆ ಸಂಪೂರ್ಣ ನಿಷೇಧ ವಿಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇಂತಹ ಅವೈಜ್ಞಾನಿಕ ಮತ್ತು ಅಪಾಯಕಾರಿ ಆಟಗಳನ್ನು ತಕ್ಷಣವೇ ಜಾತ್ರೆಯಿಂದ ತೆರವುಗೊಳಿಸಿ, ಮುಂದಿನ ದಿನಗಳಲ್ಲಿ ಇವುಗಳಿಗೆ ಅವಕಾಶ ನೀಡದಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.



