ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಚಿವ ಆರ್.ಬಿ. ತಿಮ್ಮಾಪುರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕುರಿತು ಹರಿದಾಡುತ್ತಿರುವ ಸುದ್ದಿಗಳು ಕೇವಲ ಮಾಧ್ಯಮಗಳಲ್ಲಿ ಮೂಡಿಬರುತ್ತಿರುವ ಊಹಾಪೋಹಗಳಷ್ಟೇ ಎಂದು ಹೇಳಿದರು.
“ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಯಾವುದೇ ಸೂಚನೆ ನೀಡಿಲ್ಲ. ಈ ಕುರಿತು ಪಕ್ಷದ ಉನ್ನತ ಮಟ್ಟದಲ್ಲಿ ಚರ್ಚೆಯೂ ನಡೆದಿಲ್ಲ. ಮಾಧ್ಯಮಗಳಲ್ಲಿ ಮಾತ್ರ ಈ ವಿಚಾರ ಪ್ರಸ್ತಾಪವಾಗುತ್ತಿದೆ” ಎಂದು ಅವರು ತಿಳಿಸಿದರು.
ಯತೀಂದ್ರ ಸಿದ್ದರಾಮಯ್ಯ ಅವರು ವ್ಯಕ್ತಪಡಿಸಿರುವ ಅಭಿಪ್ರಾಯ ಅವರ ವೈಯಕ್ತಿಕ ನಿಲುವಾಗಿದೆ. ಅದನ್ನು ಪಕ್ಷದ ಅಧಿಕೃತ ನಿಲುವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ತಿಮ್ಮಾಪುರ್ ಸ್ಪಷ್ಟಪಡಿಸಿದರು.
ಶಾಸಕರು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಡುವುದು ಸಹಜ. ಅದರಲ್ಲಿ ತಪ್ಪೇನಿಲ್ಲ ಎಂದು ಹೇಳಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದಿನಾಂಕ ನಿಗದಿ ಮಾಡಿ ಚರ್ಚೆಗೆ ಕರೆಯುವುದಾಗಿ ಹೇಳಿದ್ದರೂ, ಆ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ತಿಳಿಸಿದರು.



