ಬೆಂಗಳೂರು: ಸಿಲಿಕಾನ್ ಸಿಟಿಯ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಮಾನವೀಯ ಘಟನೆ ನಡೆದಿದೆ.
ಬಾಡಿಗೆ ಮನೆಯಲ್ಲಿ ಸ್ನಾನ ಮಾಡುತ್ತಿದ್ದ 23 ವರ್ಷದ ಯುವ ಸಾಫ್ಟ್‌ವೇರ್ ಇಂಜಿನಿಯರ್ ಮೇಲೆ ಗುಪ್ತವಾಗಿ ವಿಡಿಯೋ ಚಿತ್ರೀಕರಣ ಮಾಡಿದ ಆರೋಪ ಕೇಳಿಬಂದಿದೆ.
ಗರುಡಾಚಾರ್ ಪಾಳ್ಯದಲ್ಲಿ ವಾಸವಿದ್ದ ಯುವತಿ ಬುಧವಾರ ಬೆಳಿಗ್ಗೆ ಸುಮಾರು 9.30ರ ವೇಳೆಗೆ ಸ್ನಾನ ಮಾಡುತ್ತಿದ್ದಾಗ, ಪಕ್ಕದ ಕಟ್ಟಡದಿಂದ ಅಪರಿಚಿತ ವ್ಯಕ್ತಿಯೊಬ್ಬ ಮೊಬೈಲ್ ಫೋನ್ ಮೂಲಕ ವಿಡಿಯೋ ಮಾಡುತ್ತಿರುವುದನ್ನು ಗಮನಿಸಿದ್ದಾರೆ. ಇದರಿಂದ ಬೆಚ್ಚಿಬಿದ್ದ ಯುವತಿ ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದಾರೆ.
ಘಟನೆಯಿಂದ ತೀವ್ರ ಆತಂಕಗೊಂಡಿರುವ ಯುವತಿ, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಡಬಹುದು ಎಂಬ ಭೀತಿಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ.
ದೂರು ದಾಖಲಿಸಿಕೊಂಡಿರುವ ಮಹದೇವಪುರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಆರೋಪಿಯ ಗುರುತು ಪತ್ತೆಗಾಗಿ ತನಿಖೆ ಆರಂಭಿಸಿದ್ದಾರೆ. ಪ್ರಕರಣ ಸಂಬಂಧ ಸಿಸಿಟಿವಿ ದೃಶ್ಯಗಳು ಹಾಗೂ ಪಕ್ಕದ ಕಟ್ಟಡದ ವಿವರಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.



