ದಾವಣಗೆರೆ: ಮಠದ ಹಾಸ್ಟೆಲ್ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಯವರಿಗೆ ದಾವಣಗೆರೆ ವಿಶೇಷ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಹಾಸ್ಟೆಲ್‌ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆದಿದೆ ಎಂದು ಮಠದಲ್ಲಿದ್ದ ಮೂವರು ಮಕ್ಕಳು ಮಕ್ಕಳ ಕಲ್ಯಾಣ ಸಮಿತಿ (CWC) ಮುಂದೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಸ್ವಾಮೀಜಿ ಹಾಗೂ ಅವರ ಬೆಂಬಲಿಗರ ವಿರುದ್ಧ ದೌರ್ಜನ್ಯದ ಆರೋಪಗಳು ಕೇಳಿಬಂದಿದ್ದವು.
ಬಂಧನದ ಭೀತಿಯಲ್ಲಿದ್ದ ವಚನಾನಂದ ಶ್ರೀಗಳು ಏಪ್ರಿಲ್ 21ರಂದು ನಿರೀಕ್ಷಣಾ ಜಾಮೀನು ಕೋರಿ ವಿಶೇಷ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯವು ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಜಾಮೀನು ಮಂಜೂರು ಮಾಡುವ ವೇಳೆ ನ್ಯಾಯಾಲಯವು ಕೆಲ ಕಠಿಣ ಷರತ್ತುಗಳನ್ನು ವಿಧಿಸಿದೆ. ಪ್ರಕರಣದ ಸಾಕ್ಷಿಗಳಿಗೆ ಯಾವುದೇ ರೀತಿಯ ಬೆದರಿಕೆ ಹಾಕಬಾರದು ಹಾಗೂ ನ್ಯಾಯಾಲಯದ ಪೂರ್ವ ಅನುಮತಿ ಇಲ್ಲದೆ ವ್ಯಾಪ್ತಿಯನ್ನು ಬಿಟ್ಟು ತೆರಳಬಾರದು ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ.
ಈ ಪ್ರಕರಣ ಸಂಬಂಧ ಮುಂದಿನ ತನಿಖೆ ಮುಂದುವರಿದಿದ್ದು, ಕಾನೂನು ಕ್ರಮಗಳು ಮುಂದುವರಿಯಲಿವೆ ಎಂದು ತಿಳಿದುಬಂದಿದೆ.



