ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆ ನಡೆದಿದೆ.
ಅಮೃತಹಳ್ಳಿ ವ್ಯಾಪ್ತಿಯ ಆಕಾಶವಾಣಿ ಲೇಔಟ್‌ನಲ್ಲಿ ನಡುರಸ್ತೆಯಲ್ಲೇ ಮದ್ಯಪಾನ ಮಾಡುತ್ತಿದ್ದ ಯುವಕರು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾರೆ.
ಮೇ 1ರಂದು ಮುಂಜಾನೆ ಸುಮಾರು 3 ಗಂಟೆಯ ವೇಳೆ ನಾಲ್ವರು ಯುವಕರು ಕಾರನ್ನು ರಸ್ತೆ ಮಧ್ಯೆ ನಿಲ್ಲಿಸಿ ಮದ್ಯಪಾನ ಮಾಡುತ್ತಿದ್ದರು. ಕುಡಿದ ಮತ್ತಿನಲ್ಲಿ ಗಲಾಟೆ ಮಾಡುತ್ತಿದ್ದ ಇವರನ್ನು ಪ್ರಶ್ನಿಸಲು ಪೊಲೀಸರು ಮುಂದಾದಾಗ, ಯುವಕರು ಸಿಟ್ಟಿಗೆದ್ದು ಅವಾಚ್ಯ ಪದಗಳಿಂದ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.
ಅಷ್ಟೇ ಅಲ್ಲದೆ ಪೊಲೀಸರ ಬೈಕ್ ಕೀ ಕಸಿದುಕೊಂಡು ಅವರ ಕೈ ತಿರುಚಿ ಹಲ್ಲೆ ನಡೆಸಿ, ಬಳಿಕ ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆಯ ಸಂಬಂಧ ಹರ್ಷ ಮತ್ತು ಆರ್ಯನ್ ಎಂಬ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ನಡೆಯುತ್ತಿದೆ.



