ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ಪುನರ್ರಚನೆ ಕುರಿತು ಮತ್ತೆ ಚರ್ಚೆಗಳು ಜೋರಾಗಿರುವ ನಡುವೆ, ಕಾಂಗ್ರೆಸ್ ಮುಖ್ಯ ಸಚೇತಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಮಹತ್ವದ ಹೇಳಿಕೆ ನೀಡಿದ್ದಾರೆ. ಆದಷ್ಟು ಬೇಗ ಸಚಿವ ಸಂಪುಟ ಪುನರ್ರಚನೆ ನಡೆಯಲಿದ್ದು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ದೆಹಲಿ ಭೇಟಿ ಬಳಿಕ ಈ ಕುರಿತು ಅಂತಿಮ ನಿರ್ಧಾರವಾಗಲಿದೆ ಎಂದು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸಬರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಸಂಪುಟ ಪುನರ್ರಚನೆ ಅಗತ್ಯವಿದೆ ಎಂದು ಹೈಕಮಾಂಡ್ಗೆ ಮನವಿ ಮಾಡಲಾಗಿದೆ. ಅಂತಿಮವಾಗಿ ಈ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದರು.
ಕ್ಯಾಬಿನೆಟ್ ವಿಸ್ತರಣೆ ಖಚಿತವಾಗಿಯೇ ನಡೆಯಲಿದೆ. ಮೇ ತಿಂಗಳಲ್ಲೇ ಈ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ದಾವಣಗೆರೆ ಉಪಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಲೀಂ ಅಹ್ಮದ್, ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷ ಅಮಾನತು ಮಾಡಿದೆ ಎಂದು ತಿಳಿಸಿದರು. ಉಪಚುನಾವಣೆಯಲ್ಲಿ ಮತಗಳ ಅಂತರ ಕಡಿಮೆಯಾಗಿರುವ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎಂದರು.
ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದು, ಇದೇ ಕಾರಣಕ್ಕೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ ಎಂದು ಹೇಳಿದರು.
ಇನ್ನೂ ಶೃಂಗೇರಿ ಅಂಚೆ ಮತಗಳ ಮರು ಎಣಿಕೆ ವಿಚಾರವಾಗಿ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ ಸಲೀಂ ಅಹ್ಮದ್, ಈ ಹಿಂದೆ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ 201 ಮತಗಳ ಅಂತರದಿಂದ ಗೆದ್ದಿದ್ದರು. ಇದೀಗ ಮತಪತ್ರಗಳಲ್ಲಿ ತಿರುಚಾಟ ನಡೆದಿದೆ. ಇದರಲ್ಲಿ ದೊಡ್ಡ ಮಟ್ಟದ ಷಡ್ಯಂತ್ರ ನಡೆದಿರುವ ಅನುಮಾನವಿದೆ ಎಂದು ಆರೋಪಿಸಿದರು.



