ಆನೇಕಲ್: ಸ್ನೇಹಿತರ ಜೊತೆ ಈಜಲು ಕೆರೆಗೆ ಇಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಶಾಹಪುರ ಮೂಲದ ಆನಂದ್ ಮತ್ತು ಅಂಬರೀಶ್ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ನಾಲ್ವರು ಸ್ನೇಹಿತರು ಕೆರೆಯಲ್ಲಿ ಈಜಲು ತೆರಳಿದ್ದು, ಈಜು ಬಾರದ ಕಾರಣ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ನಡೆದ ಬಳಿಕ ಸ್ಥಳಕ್ಕೆ ಆನೇಕಲ್ ಹಾಗೂ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಶೋಧ ಕಾರ್ಯ ಆರಂಭಿಸಿದರು. ಆದರೆ ಸಂಜೆ ವೇಳೆಗೆ ಕತ್ತಲೆ ಆವರಿಸಿದ ಕಾರಣ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮೃತದೇಹಗಳ ಪತ್ತೆಗೆ ನಾಳೆ ಬೆಳಗ್ಗೆ ಮತ್ತೆ ಶೋಧ ಕಾರ್ಯ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಬನ್ನೇರುಘಟ್ಟ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



