ನವದೆಹಲಿ: ಐಪಿಎಲ್ ಪಂದ್ಯ ವೀಕ್ಷಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕ್ರಿಕೆಟ್ ಅಭಿಮಾನಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಈಶಾನ್ಯ ದೆಹಲಿಯ ಖಜುರಿ ಖಾಸ್ ಫ್ಲೈಓವರ್ ಬಳಿ ನಡೆದಿದೆ.
ಪೊಲೀಸರ ಮಾಹಿತಿ ಪ್ರಕಾರ, ಫ್ಲೈಓವರ್‌ನಿಂದ ಕೆಳಗೆ ಇಳಿಯುತ್ತಿದ್ದ ವೇಳೆ ಅತಿವೇಗದಲ್ಲಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಈಶಾನ್ಯ ದೆಹಲಿಯ ಕರವಾಲ್ ನಗರ ನಿವಾಸಿಗಳಾದ ಹೇಮಂತ್ ತಿವಾರಿ ಹಾಗೂ ರೋಹಿತ್ ಅಲಿಯಾಸ್ ಸೋನು ಎಂದು ಗುರುತಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 281 ಮತ್ತು 106ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಪಘಾತಕ್ಕೆ ಕಾರಣವಾದ ಕಾರು ಚಾಲಕ ಹಿಮಾಂಶುವನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.



