ನವದೆಹಲಿ: ದೆಹಲಿಯ ಸಮೀಪದ ಗಾಜಿಯಾಬಾದ್‌ನಲ್ಲಿ ಎಸಿ ಸರ್ವಿಸ್ ಸೆಂಟರ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 80 ವರ್ಷದ ವೃದ್ಧ ದಾರುಣವಾಗಿ ಸಾವನ್ನಪ್ಪಿದ್ದಾರೆ. ಪಟೇಲ್ ನಗರ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಈ ಘಟನೆ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿತು.
ಮುಂಜಾನೆ ಸುಮಾರು 3:05ರ ವೇಳೆಗೆ ಮೂರು ಅಂತಸ್ತಿನ ಕಟ್ಟಡದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಬೆಂಕಿ ಇಡೀ ಕಟ್ಟಡವನ್ನು ಆವರಿಸಿತ್ತು. ಘಟನೆಯಲ್ಲಿ ತ್ರಿಲೋಕಿ ಎಂಬ 80 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ.
ಕಟ್ಟಡದಲ್ಲಿದ್ದ ಗ್ಯಾಸ್ ಸಿಲಿಂಡರ್‌ಗಳು ಮತ್ತು ಎಸಿ ಕಂಪ್ರೆಸರ್‌ಗಳು ಸತತ ಸ್ಫೋಟಗೊಂಡ ಪರಿಣಾಮ ಬೆಂಕಿ ಇನ್ನಷ್ಟು ವ್ಯಾಪಕವಾಗಿ ಹರಡಿತ್ತು. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಸಾಕಷ್ಟು ಹರಸಾಹಸ ಪಟ್ಟಿದ್ದಾರೆ. ಹಲವು ನೀರಿನ ಮಾರ್ಗಗಳನ್ನು ಬಳಸಿದ ಬಳಿಕ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು.
ಅವಘಡದಲ್ಲಿ 10 ಕಾರುಗಳು ಹಾಗೂ 10 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಸದ್ಯ ಅಗ್ನಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



