ಹಗರಿಬೊಮ್ಮನಹಳ್ಳಿ: ಪಟ್ಟಣದ ಮಿಲ್ಟ್ರಿ ಬಯಲು ಪ್ರದೇಶದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಹಗರಿಬೊಮ್ಮನಹಳ್ಳಿ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು ₹14.06 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಕುಮಾರನಹಳ್ಳಿ ನಿವಾಸಿ ಆನಂದ್ (24) ಹಾಗೂ ಅರಳಿಹಳ್ಳಿ ನಿವಾಸಿ ಜಹಂಗೀರ್ ಬಾಷಾ (36) ಎಂದು ಗುರುತಿಸಲಾಗಿದೆ. ಆರೋಪಿಗಳು ಟಿ.ಎಂ. ಚನ್ನಬಸಯ್ಯ ಅವರ ಮನೆಯ ಬಾಗಿಲು ಮುರಿದು ಕಳ್ಳತನ ನಡೆಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕಿ ಎಸ್. ಜಾಹ್ನವಿ ಐಪಿಎಸ್ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಂಜುನಾಥ್ ಹಾಗೂ ಕೂಡ್ಲಿಗಿ ವಿಭಾಗದ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ತನಿಖೆ ನಡೆಸಲಾಯಿತು.
ಪೊಲೀಸ್ ವೃತ್ತ ನಿರೀಕ್ಷಕ ವಿಕಾಸ್ ಪಿ. ಲಮಾಣಿ, ಪಿಎಸ್ಐ ಉಮಾಪತಿ, ತಾರಾಬಾಯಿ, ನಾಗರಾಜ್ ಕೊಟಗಿ ಹಾಗೂ ಸಿಬ್ಬಂದಿಗಳ ತಂಡ ಸಿಸಿಟಿವಿ ದೃಶ್ಯಗಳು, ತಾಂತ್ರಿಕ ಮಾಹಿತಿ ಮತ್ತು ಗುಪ್ತಚರ ಮಾಹಿತಿ ಆಧರಿಸಿ ಆರೋಪಿಗಳ ಚಲನವಲನವನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಯಿತು.
ಬಂಧಿತರಿಂದ ಕದ್ದಿದ್ದ ಚಿನ್ನಾಭರಣ ಹಾಗೂ ಇತರ ಬೆಲೆಬಾಳುವ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರಕರಣ ಭೇದಿಸಿದ ಹಗರಿಬೊಮ್ಮನಹಳ್ಳಿ ಪೊಲೀಸರ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕಿ ಎಸ್. ಜಾಹ್ನವಿ ಪ್ರಶಂಸಿಸಿದ್ದಾರೆ.



