ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಷ್ಟು ದಿನ ತಂಪಾಗಿದ್ದ ಕರಾವಳಿ ಭಾಗದಲ್ಲಿ ಇದೀಗ ಮತ್ತೆ ಬಿಸಿಗಾಳಿ ಆತಂಕ ಹೆಚ್ಚಾಗಿದ್ದು, ಕೆಲವು ಜಿಲ್ಲೆಗಳಿಗೆ ಹೀಟ್ವೇವ್ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಎಚ್ಚರಿಕೆ ವಹಿಸುವಂತೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.
ಕರಾವಳಿ ಭಾಗದಲ್ಲಿ ಇಂದು ಬಿಸಿಗಾಳಿ ಅಲರ್ಟ್ ಜಾರಿಯಲ್ಲಿದ್ದು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮಳೆಯೂ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನೂ ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಗಳ ಕೆಲವು ಭಾಗಗಳಲ್ಲಿ 30 ರಿಂದ 40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.
ಮೇ 15 ಮತ್ತು 16ರಂದು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. 64.5 ಮಿ.ಮೀ ರಿಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜನರು ಸುರಕ್ಷತಾ ಕ್ರಮಗಳನ್ನು ಪಾಲಿಸಿ, ಗುಡುಗು-ಮಿಂಚಿನ ವೇಳೆ ಮರಗಳ ಕೆಳಗೆ ನಿಲ್ಲದಂತೆ ಹಾಗೂ ಅಗತ್ಯವಿಲ್ಲದೆ ಹೊರಗೆ ತೆರಳದಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮನವಿ ಮಾಡಿದೆ.



