ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಬುಧವಾರ ಗುರುಗಾಂವ್ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎಐಸಿಸಿ ಮಾಜಿ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ.
ಆದರೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಆಸ್ಪತ್ರೆ ಆಡಳಿತದಿಂದ ಇನ್ನೂ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.
ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋಝಿಕ್ಕೋಡ್ನಲ್ಲಿ ನಡೆದ ರ್ಯಾಲಿಯಲ್ಲಿ ವರ್ಚುವಲ್ ಮೂಲಕ ಭಾಗವಹಿಸಿ ಮಾಹಿತಿ ಹಂಚಿಕೊಂಡರು. ತಾವು ಕಾರ್ಯಕ್ರಮಕ್ಕೆ ನೇರವಾಗಿ ಹಾಜರಾಗಬೇಕಾಗಿತ್ತು. ಆದರೆ ತಮ್ಮ ತಾಯಿ ಆಸ್ಪತ್ರೆಗೆ ದಾಖಲಾಗಿರುವ ಕಾರಣ ಅವರ ಜೊತೆಯಲ್ಲೇ ಉಳಿಯಲು ತೀರ್ಮಾನಿಸಿದ್ದಾಗಿ ರಾಹುಲ್ ಗಾಂಧಿ ತಿಳಿಸಿದರು.
“ನಾನು ಕಾರ್ಯಕ್ರಮಕ್ಕೆ ಬರಬೇಕಿತ್ತು. ಆದರೆ ನನ್ನ ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಗನಾಗಿ ಅವರ ಬಗ್ಗೆ ಕಾಳಜಿ ವಹಿಸುವುದು ನನ್ನ ಜವಾಬ್ದಾರಿ. ಆದ್ದರಿಂದ ಅವರೊಂದಿಗೆ ಇರಲು ನಿರ್ಧರಿಸಿದ್ದೇನೆ. ಕೇರಳದ ಜನರು ಇದನ್ನು ಅರ್ಥಮಾಡಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ” ಎಂದು ರಾಹುಲ್ ಗಾಂಧಿ ಹೇಳಿದರು.
ಈ ವೇಳೆ ಈ ಹಿಂದೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಕೇರಳದ ನರ್ಸ್ ಒಬ್ಬರು ನೀಡಿದ್ದ ಸಾಂತ್ವನವನ್ನು ರಾಹುಲ್ ಗಾಂಧಿ ನೆನಪಿಸಿಕೊಂಡರು.



