ಹಗರಿಬೊಮ್ಮನಹಳ್ಳಿ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಸಾಗರ-2 ಗ್ರಾಮದಲ್ಲಿ ಮಧ್ಯರಾತ್ರಿ ದುಷ್ಕರ್ಮಿಗಳು ನಡೆಸಿದ ಕೃತ್ಯದಿಂದ ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗ್ರಾಮದ ಆರಾಧ್ಯ ದೈವಗಳಾದ ಕಲ್ಲೇಶ್ವರ ಸ್ವಾಮಿ ಹಾಗೂ ಬಸವಣ್ಣ ಮೂರ್ತಿಗಳನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವ ಘಟನೆ ಬೆಳಗಿನ ಜಾವ ಬೆಳಕಿಗೆ ಬಂದಿದೆ.
ಬೆಳಿಗ್ಗೆ ಗ್ರಾಮಸ್ಥರು ದೇವಸ್ಥಾನಕ್ಕೆ ಆಗಮಿಸಿದ ವೇಳೆ ಮೂರ್ತಿಗಳು ಧ್ವಂಸಗೊಂಡಿರುವುದು ಕಂಡುಬಂದಿದ್ದು, ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಜನರು ಸ್ಥಳಕ್ಕೆ ಜಮಾಯಿಸಿದರು. ಘಟನೆಗೆ ಸಂಬಂಧಿಸಿದಂತೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸಮಾಜದ ಶಾಂತಿ, ಸೌಹಾರ್ದತೆಗೆ ಧಕ್ಕೆ ತರುವ ಇಂತಹ ಕೃತ್ಯಗಳನ್ನು ಯಾವ ಕಾರಣಕ್ಕೂ ಸಹಿಸಲಾಗುವುದಿಲ್ಲ. ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿ ಬಲೆ ಬೀಸಿರುವುದಾಗಿ ತಿಳಿದುಬಂದಿದೆ. ತಪ್ಪಿತಸ್ಥರನ್ನು ಶೀಘ್ರ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

