ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಹಾಗೂ ಅಲ್ಪಸಂಖ್ಯಾತ ಸಮುದಾಯದ ನಡುವೆ ಅಸಮಾಧಾನ ಉಂಟಾಗಿರುವ ಹಿನ್ನೆಲೆ, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ.
ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಕೆಲ ಮುಖಂಡರು ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿರುವುದಾಗಿ ತಿಳಿದುಬಂದಿದೆ. ಈ ಬೆಳವಣಿಗೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಒಳಗಣ್ಣಿನ ಅಸಮಾಧಾನ ಹೆಚ್ಚುತ್ತಿರುವುದಾಗಿ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
ಇದರ ನಡುವೆ ಅಲ್ಪಸಂಖ್ಯಾತ ಸಂಘಟನೆಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಮೇ 16ರಂದು ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ‘ಕರ್ನಾಟಕ ಮುಸ್ಲಿಂ ಸಮಾವೇಶ’ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಕಾರ್ಯವೈಖರಿ ಹಾಗೂ ಸಮುದಾಯಕ್ಕೆ ನೀಡಿದ ಭರವಸೆಗಳ ಅನುಷ್ಠಾನದ ಕುರಿತು ಸಮಗ್ರ ವರದಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಸಭೆಗೆ ಮೊದಲು ಶಿವಾಜಿನಗರದ ಎಜೆ ಇಂಟರ್‌ನ್ಯಾಷನಲ್ ಹೋಟೆಲ್‌ನಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳು, ಉಲೇಮಾಗಳು, ಜಮಾತ್‌ಗಳು ಹಾಗೂ ತಜ್ಞರ ಸಭೆ ನಡೆದಿದ್ದು, ‘ಕಾಂಗ್ರೆಸ್ ಸರ್ಕಾರ ಹೇಳಿದ್ದೇನು? ಮಾಡಿದ್ದೇನು? ಮುಂದೇನು?’ ಎಂಬ ವರದಿ ಮಂಡಿಸಲಾಗಿದೆ. ಈ ವರದಿಯಲ್ಲಿ ರಾಜಕೀಯ ಪ್ರಾತಿನಿಧ್ಯ, ಹಿಜಾಬ್ ವಿವಾದ, ಮೀಸಲಾತಿ, ದ್ವೇಷ ಭಾಷಣ, ಶಿಕ್ಷಣ ಅನುದಾನ ಸೇರಿದಂತೆ ಹಲವು ವಿಷಯಗಳನ್ನು ವಿಶ್ಲೇಷಿಸಲಾಗಿದೆ.
ಸಮಾವೇಶಕ್ಕೆ ಯಾವುದೇ ರಾಜಕಾರಣಿಗಳಿಗೆ ಆಹ್ವಾನ ನೀಡಿಲ್ಲ ಎಂದು ಆಯೋಜಕರು ತಿಳಿಸಿದ್ದಾರೆ. ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು ಹಾಗೂ ಶಾಸಕರಿಗೆ ತಲುಪಿಸಲಾಗುವುದು ಎಂದು ತಿಳಿಸಲಾಗಿದೆ.



