ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಗುರುವಾರ (ಮೇ 14) ತಡರಾತ್ರಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಯ ಪರಿಣಾಮ ಭೀಕರ ದುರಂತ ಸಂಭವಿಸಿದೆ. ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಎಂದು ಗುರುತಿಸಲಾಗಿದೆ.
ಮನೆಯ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ಕುಟುಂಬವು ತಾತ್ಕಾಲಿಕವಾಗಿ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಘಟನೆ ನಡೆದ ರಾತ್ರಿ ಎಲ್ಲರೂ ಮನೆಯಲ್ಲಿ ಮಲಗಿದ್ದ ವೇಳೆ ಧಾರಾಕಾರ ಮಳೆಯಿಂದ ಮೇಲ್ಛಾವಣಿ ಕುಸಿದು ಈ ದುರಂತ ಸಂಭವಿಸಿದೆ.
ಈ ವೇಳೆ ಮನೆಯಿಂದ ಹೊರಗೆ ಮಲಗಿದ್ದ ಗುರುನಾಥನ ತಾಯಿ ಹಾಗೂ ಪುತ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಹಾಗೂ ಅಧಿಕಾರಿಗಳು ತಕ್ಷಣ ಕಾರ್ಯಾಚರಣೆ ನಡೆಸಿ ನಾಲ್ವರ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಸ್ಥಳಕ್ಕೆ ಸಿಂದಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



