HomeGadag Newsಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕೇಂದ್ರ ಸರ್ಕಾರ ಸಂಪೂರ್ಣ ವಿಫಲ: ಮಿಥುನ ಜಿ. ಪಾಟೀಲ ಆಕ್ರೋಶ

ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕೇಂದ್ರ ಸರ್ಕಾರ ಸಂಪೂರ್ಣ ವಿಫಲ: ಮಿಥುನ ಜಿ. ಪಾಟೀಲ ಆಕ್ರೋಶ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಡಂಬಳ: ದೇಶದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ಸಮಾನ ಅವಕಾಶ ಕಲ್ಪಿಸುವ ಉದ್ದೇಶದಿಂದ ಜಾರಿಗೆ ತರಲಾದ ನೀಟ್ ಪರೀಕ್ಷೆಯು ಇದೀಗ ವಿಶ್ವಾಸಾರ್ಹತೆಯ ಸಂಕಷ್ಟಕ್ಕೆ ಸಿಲುಕಿರುವುದು ಅತ್ಯಂತ ದುರಂತದ ಸಂಗತಿ ಎಂದು ರೋಣ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಿಥುನ ಜಿ. ಪಾಟೀಲ ಆರೋಪಿಸಿದರು.
ಡಂಬಳ ಹೋಬಳಿಯ ಡೋಣಿ ತಾಂಡದಲ್ಲಿ ಮಾತನಾಡಿದ ಅವರು, ೨೦೨೬ರ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ ಎಂದು ಹೇಳಿದರು.
ವರ್ಷಗಳ ಕಾಲ ಪರಿಶ್ರಮಪಟ್ಟು ತಯಾರಿ ನಡೆಸಿದ ವಿದ್ಯಾರ್ಥಿಗಳ ಭವಿಷ್ಯ ಇಂದು ಅನಿಶ್ಚಿತತೆಯ ಅಂಚಿನಲ್ಲಿದೆ. ಇಂತಹ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಜಾಗೃತಿ ವಹಿಸಿ ವಿದ್ಯಾರ್ಥಿಗಳಿಗೆ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ನೀಟ್ ಪರೀಕ್ಷೆ ರದ್ದುಗೊಂಡಿರುವುದು ಕೇವಲ ಆಡಳಿತಾತ್ಮಕ ನಿರ್ಧಾರವಲ್ಲ. ಇದು ಸುಮಾರು 22 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಕನಸು ಮತ್ತು ಪೋಷಕರ ನಂಬಿಕೆಗೆ ಬಿದ್ದ ದೊಡ್ಡ ಹೊಡೆತವಾಗಿದೆ. ವಿದ್ಯಾರ್ಥಿಗಳ ಶ್ರಮಕ್ಕೆ ನ್ಯಾಯ ಸಿಗಬೇಕಾದರೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಸಂಪೂರ್ಣ ಜವಾಬ್ದಾರಿ ಹೊತ್ತು ಪಾರದರ್ಶಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆಯುತ್ತಿರುವುದು ಇದೇ ಮೊದಲಲ್ಲ ಎಂದು ಆರೋಪಿಸಿದ ಅವರು, 2024ರ ಪರೀಕ್ಷೆಯಲ್ಲಿಯೂ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು ಕೇಳಿ ಬಂದಿದ್ದವು. ಆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ ಪರೀಕ್ಷಾ ಸುರಕ್ಷತೆಗಾಗಿ ಕಠಿಣ ಮಾರ್ಗಸೂಚಿಗಳನ್ನು ರೂಪಿಸಿತ್ತು ಎಂದು ಹೇಳಿದರು.
ಡಿಜಿಟಲ್ ಲಾಕ್ ವ್ಯವಸ್ಥೆ, ಬಯೋಮೆಟ್ರಿಕ್ ಪರಿಶೀಲನೆ, ಸಿಸಿಟಿವಿ ನಿಗಾ ಸೇರಿದಂತೆ ಹಲವು ಭದ್ರತಾ ಕ್ರಮಗಳನ್ನು ಘೋಷಿಸಲಾಗಿದ್ದರೂ, ಅವು ಕೇವಲ ಕಾಗದದಲ್ಲೇ ಉಳಿದಿವೆ. ಜಾರಿಗೆ ತರುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.
ದೇಶದ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಲ್ಲಿ ಯಾವುದೇ ನಿರ್ಲಕ್ಷ್ಯ ಸಹಿಸಲಾಗದು. ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ನಂಬಿಕೆ ಉಳಿಸಿಕೊಳ್ಳಬೇಕಾದರೆ ಪರೀಕ್ಷಾ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ಮತ್ತು ತಂತ್ರಜ್ಞಾನ ಆಧಾರಿತ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.
ಪ್ರತಿ ವರ್ಷ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ಹೊತ್ತು ನೀಟ್ ಪರೀಕ್ಷೆಗೆ ಹಾಜರಾಗುತ್ತಾರೆ. ಗ್ರಾಮೀಣ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಮಕ್ಕಳು ದಿನರಾತ್ರಿ ಪರಿಶ್ರಮಪಟ್ಟು ಪರೀಕ್ಷೆಗೆ ಸಿದ್ಧರಾಗುತ್ತಾರೆ. ಆದರೆ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳು ಅವರ ಮಾನಸಿಕ ಸ್ಥೈರ್ಯ ಕುಗ್ಗಿಸುವುದಲ್ಲದೆ, ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಹಾಳು ಮಾಡುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಈ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
“ನೀಟ್ ಪರೀಕ್ಷೆಯ ವಿಶ್ವಾಸಾರ್ಹತೆ ಕುಸಿದರೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಕತ್ತಲೆಯಾಗುತ್ತದೆ, ಕೇಂದ್ರ ಸರ್ಕಾರ ತಕ್ಷಣ ಹೊಣೆ ಹೊತ್ತು ಕ್ರಮ ಕೈಗೊಳ್ಳಬೇಕು.”
ಮಿಥುನ ಜಿ. ಪಾಟೀಲ
ರೋಣ ಗ್ಯಾರಂಟಿ ಸಮಿತಿ ಅಧ್ಯಕ್ಷ

Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!