ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದ ಹೊರವಲಯದ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಕಂಪನಿ ಉದ್ಯೋಗಿಯೊಬ್ಬರ ಕಾರನ್ನು ದುಷ್ಕರ್ಮಿಗಳ ಗ್ಯಾಂಗ್ ಅಡ್ಡಗಟ್ಟಿ 26 ಲಕ್ಷ ರೂ. ದರೋಡೆ ಮಾಡಿದ ಘಟನೆ ನಡೆದಿದೆ.
ಮೈಸೂರಿನ ಖಾಸಗಿ ಕಂಪನಿ ಉದ್ಯೋಗಿ ಗೋವಿಂದರಾಜು ಅವರು ಐ-20 ಕಾರಿನಲ್ಲಿ ಕಂಪನಿಗಳ ನಡುವೆ ಹಣ ಸಾಗಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರಾತ್ರಿ ಸುಮಾರು 7 ಗಂಟೆ ಸಮಯದಲ್ಲಿ ಐಶ್ವರ್ಯ ಕಾನ್ವೆಂಟ್ ಬಳಿ ಇನ್ನೋವಾ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅವರ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿದ್ದಾರೆ.
ನಂತರ ಕಾರಿನ ಗಾಜು ಒಡೆದು, ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿದ ಆರೋಪಿಗಳು 26 ಲಕ್ಷ ರೂ. ನಗದು ಹಣವನ್ನು ದೋಚಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆ ಬಗ್ಗೆ ತಕ್ಷಣ ಮದ್ದೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ವಿ.ಜೆ. ಶೋಭರಾಣಿ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.



