ತಿರುವನಂತಪುರಂ: ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಅವರಿಗೆ ಪದವಿ ಮತ್ತು ಗೌಪ್ಯತಾ ಪ್ರಮಾಣವಚನ ಬೋಧಿಸಿದರು. ಇದೇ ವೇಳೆ 20 ಮಂದಿ ಸಚಿವರೂ ಸಹ ಪ್ರಮಾಣವಚನ ಸ್ವೀಕರಿಸಿ ನೂತನ ಯುಡಿಎಫ್ ಸರ್ಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ.
ಇತ್ತೀಚೆಗೆ ನಡೆದ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಭರ್ಜರಿ ಜಯ ಸಾಧಿಸಿ ಅಧಿಕಾರಕ್ಕೆ ಮರಳಿತ್ತು. ಬಳಿಕ ನಡೆದ ಸಭೆಯಲ್ಲಿ ವಿಡಿ ಸತೀಶನ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದ್ದು, ಇದೀಗ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ನೂತನ ಸಚಿವ ಸಂಪುಟದಲ್ಲಿ ಕಾಂಗ್ರೆಸ್ ಪಕ್ಷದ 11 ಮಂದಿಗೆ ಅವಕಾಶ ನೀಡಲಾಗಿದೆ. ಮುಸ್ಲಿಂ ಲೀಗ್ನ ಐವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೊತೆಗೆ ಕೇರಳ ಕಾಂಗ್ರೆಸ್-ಜೋಸೆಫ್ನ ಮಾನ್ಸ್ ಜೋಸೆಫ್, ಕ್ರಾಂತಿಕಾರಿ ಸಮಾಜವಾದಿ ಪಕ್ಷದ ಶಿಬು ಬೇಬಿ ಜಾನ್, ಕೇರಳ ಕಾಂಗ್ರೆಸ್-ಜಾಕೋಬ್ನ ಅನೂಪ್ ಜಾಕೋಬ್ ಹಾಗೂ ಸಿಪಿ ಜಾನ್ ಅವರಿಗೂ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ.
ಕಾಂಗ್ರೆಸ್ ಪಕ್ಷದಿಂದ ರಮೇಶ್ ಚೆನ್ನಿತ್ತಲ, ಸನ್ನಿ ಜೋಸೆಫ್, ಕೆ. ಮುರಳೀಧರನ್, ಎ.ಪಿ. ಅನಿಲ್ ಕುಮಾರ್, ಪಿ.ಸಿ. ವಿಷ್ಣುನಾಥ್, ರೋಜಿ ಎಂ ಜಾನ್, ಬಿಂದು ಕೃಷ್ಣ, ಎಂ. ಲಿಜು, ಟಿ. ಸಿದ್ದಿಕ್, ಕೆ.ಎ. ತುಳಸಿ ಮತ್ತು ಒ.ಜೆ. ಜನೀಶ್ ಸಚಿವರಾಗಿದ್ದಾರೆ.



