ಬೆಂಗಳೂರು: ರಾಜಧಾನಿಯ ಕೆಪಿಸಿಸಿ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಗಲಾಟೆ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ನಡೆದಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್ ಕೆಲವು ಪದಾಧಿಕಾರಿಗಳನ್ನು ಹುದ್ದೆಯಿಂದ ವಜಾಗೊಳಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ರಾಷ್ಟ್ರೀಯ ಯುವ ಕಾಂಗ್ರೆಸ್ ನಿನ್ನೆ ಹಲವು ಪದಾಧಿಕಾರಿಗಳನ್ನು ಸ್ಥಾನದಿಂದ ತೆರವುಗೊಳಿಸಿತ್ತು. ಈ ವಿಚಾರಕ್ಕೆ ಸಂಬಂಧಿಸಿದ ಅಸಮಾಧಾನ ಇಂದು ಕೆಪಿಸಿಸಿ ಕಚೇರಿಯಲ್ಲಿ ಬಹಿರಂಗಗೊಂಡಿದ್ದು, ಪದಾಧಿಕಾರಿಗಳ ಬೆಂಬಲಿಗರ ನಡುವೆ ತೀವ್ರ ವಾಗ್ವಾದ ನಡೆದಿದೆ.
NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಸಂಬಂಧ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಈ ಸಭೆಯ ವೇಳೆ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಹಾಗೂ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಬೆಂಬಲಿಗರ ನಡುವೆ ಮಾತಿನ ಚಕಮಕಿ ಶುರುವಾಗಿದೆ.
ವಾದ-ಪ್ರತಿವಾದ ತೀವ್ರಗೊಂಡ ಪರಿಣಾಮ, ಉಭಯ ಗುಂಪಿನ ಕಾರ್ಯಕರ್ತರು ಪರಸ್ಪರ ತಳ್ಳಾಟ-ನೂಕಾಟ ನಡೆಸಿದ್ದು, ಬಳಿಕ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದಾರೆ ಎನ್ನಲಾಗಿದೆ.
ಕಚೇರಿಯಲ್ಲಿದ್ದ ಹಿರಿಯ ಮುಖಂಡರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಿಂದ ಕೆಲಕಾಲ ಕೆಪಿಸಿಸಿ ಕಚೇರಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಪಕ್ಷದ ಆಂತರಿಕ ಬೆಳವಣಿಗೆ ಹಾಗೂ ಪದಾಧಿಕಾರಿಗಳ ವಜಾ ನಿರ್ಧಾರವೇ ಈ ಗಲಾಟೆಗೆ ಕಾರಣ ಎನ್ನಲಾಗುತ್ತಿದ್ದು, ಈ ಬಗ್ಗೆ ಪಕ್ಷದ ನಾಯಕರು ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.



