ಸೂರತ್: ಬ್ರಾಹ್ಮಣ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್ ಮಾಡಿದ್ದಾರೆಯೆಂಬ ಆರೋಪದಲ್ಲಿ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಕಾನೂನು ಕ್ರಮಕ್ಕೆ ಸೂರತ್ ನ್ಯಾಯಾಲಯ ಗ್ರೀನ್ ಸಿಗ್ನಲ್ ನೀಡಿದೆ. ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸ್ಥಳೀಯ ಪೊಲೀಸರಿಗೆ ಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ.
ವಿಎಚ್ಪಿ ನಾಯಕ ಕಮಲೇಶ್ ರಾವಲ್ ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ವಿಚಾರಣೆ ನಡೆಸಿದ ನ್ಯಾಯಾಲಯ, ಅನುರಾಗ್ ಕಶ್ಯಪ್ ಅವರ ಸಾಮಾಜಿಕ ಜಾಲತಾಣದ ಪೋಸ್ಟ್ಗಳು ಸಮುದಾಯಗಳ ನಡುವೆ ದ್ವೇಷ ಹುಟ್ಟುಹಾಕುವ ಸ್ವಭಾವ ಹೊಂದಿವೆ ಎಂಬ ಪ್ರಾಥಮಿಕ ಅಂಶಗಳು ಕಂಡುಬಂದಿವೆ ಎಂದು ಅಭಿಪ್ರಾಯಪಟ್ಟಿದೆ.
ಬ್ರಾಹ್ಮಣ ಸಮುದಾಯವನ್ನು ಅವಮಾನಿಸುವ ಉದ್ದೇಶದಿಂದಲೇ ಪೋಸ್ಟ್ಗಳನ್ನು ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ‘ಫುಲೆ’ ಚಿತ್ರದ ಟ್ರೇಲರ್ ವಿವಾದದ ಬಳಿಕ ಎಕ್ಸ್ ಖಾತೆಯಲ್ಲಿ ಕಶ್ಯಪ್ ಮಾಡಿದ್ದ ಪ್ರತಿಕ್ರಿಯೆಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದವು.
ಇದಲ್ಲದೆ, 2020ರಲ್ಲಿ ಕೇಂದ್ರ ಸರ್ಕಾರ ಹಾಗೂ ಹಿಂದೂ ಸಮುದಾಯ ಕುರಿತು ಮಾಡಿದ್ದ ಹಳೆಯ ಪೋಸ್ಟ್ಗಳನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಾರ್ವಜನಿಕ ಪ್ರಭಾವ ಹೊಂದಿರುವ ವ್ಯಕ್ತಿಗಳು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ದೂರಿನಲ್ಲಿ ಒತ್ತಿ ಹೇಳಲಾಗಿದೆ.



