ಡೆಹ್ರಾಡೂನ್: ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ, ಹಿರಿಯ ಬಿಜೆಪಿ ನಾಯಕ ಹಾಗೂ ನಿವೃತ್ತ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ ಅವರು ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸೇನೆಯಲ್ಲಿ ಮಹತ್ವದ ಸೇವೆ ಸಲ್ಲಿಸಿ ನಿವೃತ್ತರಾದ ಬಳಿಕ ರಾಜಕೀಯ ಪ್ರವೇಶಿಸಿದ್ದ ಖಂಡೂರಿ, ಉತ್ತರಾಖಂಡ ರಾಜಕೀಯದಲ್ಲಿ ಪ್ರಾಮಾಣಿಕ ಮತ್ತು ಶಿಸ್ತಿನ ಆಡಳಿತಗಾರರಾಗಿ ಗುರುತಿಸಿಕೊಂಡಿದ್ದರು.
ಅವರು ಎರಡು ಅವಧಿಗೆ ಉತ್ತರಾಖಂಡ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಮೊದಲ ಬಾರಿ 2007ರಿಂದ 2009ರವರೆಗೆ ಹಾಗೂ ಎರಡನೇ ಬಾರಿ 2011ರಿಂದ 2012ರವರೆಗೆ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದರು.
ತಮ್ಮ ಆಡಳಿತಾವಧಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಕಠಿಣ ನಿಲುವು ತಾಳಿ, ಪಾರದರ್ಶಕ ಹಾಗೂ ಶಿಸ್ತುಬದ್ಧ ಆಡಳಿತ ವ್ಯವಸ್ಥೆ ರೂಪಿಸಲು ಮಹತ್ವದ ಹೆಜ್ಜೆಗಳನ್ನು ಇಟ್ಟಿದ್ದರು. ಅವರ ಆಡಳಿತ ಶೈಲಿ ಜನಸಾಮಾನ್ಯರಲ್ಲಿ ವಿಶ್ವಾಸ ಮೂಡಿಸಿತ್ತು.
ಜನರಲ್ ಖಂಡೂರಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೇರಿದಂತೆ ಹಲವು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಧಾಮಿ, “ಭುವನ್ ಚಂದ್ರ ಖಂಡೂರಿ ಅವರ ನಿಧನ ರಾಷ್ಟ್ರೀಯ ರಾಜಕೀಯಕ್ಕೆ ತುಂಬಲಾಗದ ನಷ್ಟ. ರಾಜ್ಯದ ಅಭಿವೃದ್ಧಿ ಹಾಗೂ ಸುಶಾಸನಕ್ಕಾಗಿ ಅವರು ನೀಡಿದ ಕೊಡುಗೆ ಸದಾ ಸ್ಮರಣೀಯ” ಎಂದು ದುಃಖ ವ್ಯಕ್ತಪಡಿಸಿದ್ದಾರೆ.
ಖಂಡೂರಿ ಅವರ ಅಗಲಿಕೆಯಿಂದ ಉತ್ತರಾಖಂಡ ಮಾತ್ರವಲ್ಲದೆ ರಾಷ್ಟ್ರೀಯ ರಾಜಕೀಯ ವಲಯದಲ್ಲೂ ಶೋಕದ ವಾತಾವರಣ ನಿರ್ಮಾಣವಾಗಿದೆ. ಅವರ ಅಂತಿಮ ದರ್ಶನಕ್ಕೆ ರಾಜಕೀಯ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಗಮಿಸುತ್ತಿದ್ದಾರೆ.



