ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಸಲ್ಲಿಸಿದ್ದ ಕಾಲಾವಕಾಶ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಜಿಬಿಎ ಚುನಾವಣೆಯನ್ನು ನಡೆಸಲು ಆಗಸ್ಟ್ 31ರವರೆಗೆ ಮೂರು ತಿಂಗಳ ಹೆಚ್ಚುವರಿ ಸಮಯ ನೀಡಿದೆ.
ಈ ಹಿಂದೆ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು. ಆದರೆ ಚುನಾವಣಾ ಸಿದ್ಧತೆಗಳಿಗೆ ಹೆಚ್ಚಿನ ಸಮಯ ಅಗತ್ಯವಿದೆ ಎಂದು ಹೇಳಿ ರಾಜ್ಯ ಸರ್ಕಾರ ಹಾಗೂ ಜಿಬಿಎ ಮುಖ್ಯ ಆಯುಕ್ತರು ಹೆಚ್ಚುವರಿ ಗಡುವು ಕೋರಿ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು. “ಚುನಾವಣೆ ನಡೆಸಲು ಅಗತ್ಯ ಬಜೆಟ್ ಮೀಸಲಿಡಲಾಗಿದೆ. ಆದರೆ ಸಿಬ್ಬಂದಿ ಕೊರತೆ ಸೇರಿದಂತೆ ಕೆಲವು ಆಡಳಿತಾತ್ಮಕ ಸಮಸ್ಯೆಗಳಿವೆ. ಹೀಗಾಗಿ 60 ದಿನಗಳ ಹೆಚ್ಚುವರಿ ಕಾಲಾವಕಾಶ ಅಗತ್ಯವಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಇದೇ ವೇಳೆ ಅರ್ಜಿದಾರರ ಪರ ವಕೀಲರು ಸರ್ಕಾರದ ಮನವಿಗೆ ವಿರೋಧ ವ್ಯಕ್ತಪಡಿಸಿದರು. “ಈ ಹಿಂದೆ ಹಲವಾರು ಬಾರಿ ಕಾಲಾವಕಾಶ ನೀಡಲಾಗಿದೆ. ಆದರೂ ಸರ್ಕಾರ ಚುನಾವಣೆ ನಡೆಸಲು ವಿಳಂಬ ಮಾಡುತ್ತಿದೆ. ಹೆಚ್ಚಿನ ಸಮಯ ನೀಡಬಾರದು” ಎಂದು ವಾದ ಮಂಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್ ಪೀಠ, “ಸರ್ಕಾರ ಚುನಾವಣೆಯನ್ನು ಮುಂದೂಡಲು ಯತ್ನಿಸುತ್ತಿರುವಂತೆ ಕಾಣುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿತು. ಆದರೆ ಅಂತಿಮವಾಗಿ ಆಗಸ್ಟ್ 31ರವರೆಗೆ ಗಡುವು ವಿಸ್ತರಿಸಿ, “ಇದೇ ಕೊನೆಯ ಕಾಲಾವಕಾಶ” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿತು.
ರಾಜ್ಯದಲ್ಲಿ ಎಸ್‌ಐಆರ್ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿರುವುದು ಹಾಗೂ ಸಿಬ್ಬಂದಿ ಕೊರತೆ ಇರುವುದನ್ನು ರಾಜ್ಯ ಚುನಾವಣಾ ಆಯೋಗ ತನ್ನ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದೆ. ಈ ತೀರ್ಪಿನೊಂದಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತೊಮ್ಮೆ ಮುಂದೂಡಲ್ಪಟ್ಟಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.



