ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಡಿವಾಳ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಜೊತೆಗೆ ಮೋಮೋಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಈ ವೇಳೆ ಗೋಶ್ ಮತ್ತು ಅತುಲ್ ಎಂಬವರೊಂದಿಗೆ ಆಕೆಗೆ ಪರಿಚಯವಾಗಿತ್ತು ಎನ್ನಲಾಗಿದೆ.
ಮೂವರು ಸೇರಿ ಪಾರ್ಟಿ ಮಾಡಿದ್ದ ವೇಳೆ ಘಟನೆ ನಡೆದಿರುವ ಆರೋಪ ಕೇಳಿಬಂದಿದೆ. ಪಾರ್ಟಿ ಬಳಿಕ ಗೋಶ್ ಹಾಗೂ ಅತುಲ್ ಊಟ ತರಲು ಹೊರಗೆ ತೆರಳಿದ್ದ ಸಂದರ್ಭದಲ್ಲಿ, ಹೈನಾಸ್ ಎಂಬ ವ್ಯಕ್ತಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಮಡಿವಾಳ ಪೊಲೀಸರು ಆರೋಪಿಗಳ ವಿರುದ್ಧ ತನಿಖೆ ಮುಂದುವರಿಸಿದ್ದು, ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.



