ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ, ದೇಶದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವುದನ್ನು ರಾಹುಲ್ ಗಾಂಧಿ ಸಹಿಸಿಕೊಳ್ಳಲು ಆಗುತ್ತಿಲ್ಲ. ಆದ್ದರಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದು ಆರೋಪಿಸಿದರು.
“ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮಟ್ಟದ ನಾಯಕರು ಈ ರೀತಿಯ ಬಾಲಿಷ ಹೇಳಿಕೆಗಳನ್ನು ನೀಡಬಾರದು. ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುವುದು ಸರಿಯಲ್ಲ” ಎಂದು ವಿಜಯೇಂದ್ರ ಹೇಳಿದರು.
ಹಿಂದುಳಿದ ವರ್ಗದ ಸಮುದಾಯದಿಂದ ಬಂದ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ಭಾರತವನ್ನು ವಿಶ್ವದ ನಾಲ್ಕನೇ ಅತಿ ದೊಡ್ಡ ಆರ್ಥಿಕ ಶಕ್ತಿಯನ್ನಾಗಿ ರೂಪಿಸಿರುವ ನಾಯಕತ್ವವನ್ನು ಕಾಂಗ್ರೆಸ್ ಸಹಿಸಿಕೊಳ್ಳುತ್ತಿಲ್ಲ ಎಂದು ಟೀಕಿಸಿದರು.
ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಪಡಿಸುವ ಧೈರ್ಯ ಕಾಂಗ್ರೆಸ್‌ಗೆ ಇರಲಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಆ ನಿರ್ಧಾರ ಕೈಗೊಳ್ಳಲಾಯಿತು. ದೇಶದಲ್ಲಿ ನಕ್ಸಲಿಸಂ ನಿರ್ಮೂಲನೆ ಮಾಡುವ ದಿಸೆಯಲ್ಲಿಯೂ ಅಮಿತ್ ಶಾ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ಪ್ರಧಾನಿ ಮೋದಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದಾರೆ. ದೇಶದ ಅಭಿವೃದ್ಧಿಯನ್ನು ಸಹಿಸದೇ ರಾಹುಲ್ ಗಾಂಧಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.



