ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಇಂದೂ ಮಳೆಯ ಅಬ್ಬರ ಮುಂದುವರಿಯಲಿದ್ದು, ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ.
ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ಕೊಪ್ಪಳ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಹ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲೂ ಗಾಳಿಯ ವೇಗ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಒಣಹವಾಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗದ ಕರ್ನಾಟಕ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಮೇ 25ರವರೆಗೆ ಭಾರೀ ಮಳೆಯ ಎಚ್ಚರಿಕೆ
ಮೇ 22ರಿಂದ ಮೇ 25ರವರೆಗೆ ರಾಜ್ಯದ ಒಳನಾಡು ಭಾಗಗಳಲ್ಲಿ ಗುಡುಗು-ಸಿಡಿಲಿನ ಅಬ್ಬರ ಹೆಚ್ಚಾಗಲಿದ್ದು, ಗಂಟೆಗೆ 50-60 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಮೇ 21ರಿಂದ ಮೇ 25ರವರೆಗೆ ಮಿಂಚು ಹಾಗೂ ಸಿಡಿಲಿನ ಮುನ್ನೆಚ್ಚರಿಕೆ ನೀಡಲಾಗಿದ್ದು, ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರಲು ಸೂಚಿಸಲಾಗಿದೆ.
ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಸೂಚನೆ
ತೀವ್ರ ಮಳೆ ಮತ್ತು ಗಾಳಿಯಿಂದ ತಗ್ಗು ಪ್ರದೇಶಗಳಲ್ಲಿ ಜಲಾವೃತ, ಸಂಚಾರ ದಟ್ಟಣೆ ಹಾಗೂ ವಿದ್ಯುತ್ ವ್ಯತ್ಯಯ ಸಂಭವಿಸುವ ಸಾಧ್ಯತೆ ಇದೆ. ಬಲವಾದ ಗಾಳಿಗೆ ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳುವ ಅಪಾಯವೂ ಇದೆ ಎಂದು ಇಲಾಖೆ ತಿಳಿಸಿದೆ.
ಸಾರ್ವಜನಿಕರು ಮಳೆ-ಗಾಳಿಯ ವೇಳೆ ಅನಗತ್ಯವಾಗಿ ಹೊರಗೆ ಸಂಚರಿಸದಂತೆ, ಮರಗಳ ಕೆಳಗೆ ಆಶ್ರಯ ಪಡೆಯದಂತೆ ಹಾಗೂ ಸುರಕ್ಷಿತ ಸ್ಥಳಗಳಲ್ಲಿ ಇರಲು ಸೂಚಿಸಲಾಗಿದೆ. ಜೊತೆಗೆ ರೈತರು ತೆರೆದ ಪ್ರದೇಶಗಳಲ್ಲಿ ಸಂಗ್ರಹಿಸಿರುವ ಬೆಳೆಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿಕೊಳ್ಳುವಂತೆ ಜಾಗೃತಿ ಮೂಡಿಸಲಾಗಿದೆ.



