ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಯ ರಾಜಕಾರಣದಲ್ಲೇ ತೊಡಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅದಕ್ಕಾಗಿಯೇ ಹಿಜಾಬ್ ಮರು ಜಾರಿ ಮಾಡಲಾಗಿದೆ. ಆಳಂದ ಗಲಭೆ ಪ್ರಕರಣಗಳನ್ನು ಕೂಡ ವಾಪಸ್ ಪಡೆಯಲಾಗಿದೆ ಎಂದು ಆರೋಪಿಸಿದರು.
ಸರ್ಫ್ ಹಾಕಿ, ಡೆಟ್ಟಾಲ್ ಹಾಕಿ ತೊಳೆದರೂ ಈ ಸರ್ಕಾರದ ದುಷ್ಟ ಬುದ್ಧಿ ಹೋಗಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಪೊಲೀಸರ ಮೇಲೆ ಹಲ್ಲೆ ನಡೆಸಿದವರು ಹಾಗೂ ಕೇಂದ್ರ ಸಚಿವರ ಕಾರು ಒಡೆದವರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ಆರೋಪಿಸಿದ ಅಶೋಕ್, ಕೋಮುಗಲಭೆ ಪ್ರಚೋದಿಸಿದವರ ಮೇಲಿನ ಕೇಸ್ ವಾಪಸ್ ಪಡೆಯುವುದು ಸರಿಯಲ್ಲ ಎಂದರು.
ಎಲ್ಲ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವುದು ಸರ್ಕಾರದ ಕರ್ತವ್ಯ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಟೀಕಿಸಿದರು.
ದೇಶದ ಭದ್ರತೆಗೆ ಅಪಾಯ ಉಂಟುಮಾಡುವ ಇಂತಹ ನಿರ್ಧಾರಗಳನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ. ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಹಿಜಾಬ್ ಮರು ಜಾರಿಯನ್ನೂ ಮುಸ್ಲಿಂ ಓಲೈಕೆಯ ಭಾಗವೆಂದೇ ಆರೋಪಿಸಿದ ಅಶೋಕ್, ರೈತರು ಹಾಗೂ ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಲಿ ಎಂದು ಸರ್ಕಾರಕ್ಕೆ ಸವಾಲು ಹಾಕಿದರು.
ಕೋಮುಗಲಭೆಗೆ ಪ್ರಚೋದನೆ ನೀಡಿದವರ ಮೇಲಿನ ಪ್ರಕರಣಗಳನ್ನು ಕೈಬಿಟ್ಟು ಸರ್ಕಾರ ಬಹುಸಂಖ್ಯಾತ ಸಮುದಾಯಕ್ಕೆ ದ್ರೋಹ ಮಾಡಿದೆ ಎಂದು ಆರ್ ಅಶೋಕ್ ಆರೋಪಿಸಿದರು.



