ಬೀಜಿಂಗ್: ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಅನಿಲ ಸ್ಫೋಟದಲ್ಲಿ ಕನಿಷ್ಠ 82 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಇತ್ತೀಚಿನ ವರ್ಷಗಳಲ್ಲಿ ಚೀನಾದಲ್ಲಿ ಸಂಭವಿಸಿದ ಅತಿದೊಡ್ಡ ಕೈಗಾರಿಕಾ ದುರಂತಗಳಲ್ಲಿ ಇದೂ ಒಂದಾಗಿದೆ ಎಂದು ವರದಿಯಾಗಿದೆ.
ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಜೆ 7:29ರ ಸುಮಾರಿಗೆ ಸ್ಫೋಟ ಸಂಭವಿಸಿದೆ.
ಅಪಘಾತ ಸಂಭವಿಸಿದ ವೇಳೆ ಒಟ್ಟು 247 ಕಾರ್ಮಿಕರು ಗಣಿಯ ಒಳಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇವರಲ್ಲಿ ಬಹುತೇಕರನ್ನು ಶನಿವಾರ ಬೆಳಗ್ಗಿನ ವೇಳೆಗೆ ರಕ್ಷಿಸಿ ಮೇಲ್ಮೈಗೆ ಕರೆತರಲಾಗಿದೆ.
ಸ್ಫೋಟದ ಪರಿಣಾಮ 82 ಮಂದಿ ಮೃತಪಟ್ಟಿದ್ದು, ಇನ್ನೂ ಒಂಬತ್ತು ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ರಕ್ಷಣಾ ಸಿಬ್ಬಂದಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಸೂಚನೆ ನೀಡಿದ್ದಾರೆ. ಅದೇ ವೇಳೆ ಈ ಭೀಕರ ದುರಂತದ ಕುರಿತು ಸಮಗ್ರ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಅವರು ಆದೇಶ ನೀಡಿದ್ದಾರೆ.



