ಗದಗ: ಜಿಲ್ಲೆಯಲ್ಲಿ ಉತ್ತಮ ಮಳೆಯ ಹಿನ್ನೆಲೆ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದರೂ, ಡೀಸೆಲ್ ಅಭಾವ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
ಡೀಸೆಲ್ ಪಡೆಯಲು ರೈತರು ಟ್ರ್ಯಾಕ್ಟರ್ ಹಾಗೂ ಕ್ಯಾನ್‌ಗಳೊಂದಿಗೆ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಲುಗಟ್ಟಿ ನಿಂತಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಮಂಜರಾಪುರ ರಸ್ತೆಯ ಪೆಟ್ರೋಲ್ ಬಂಕ್‌ನಲ್ಲಿ ಡೀಸೆಲ್ ಹಾಗೂ ಪೆಟ್ರೋಲ್ ಪಡೆಯಲು ಜನರು ಮುಗಿಬಿದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಹಲವೆಡೆ ಡೀಸೆಲ್ ಸಂಪೂರ್ಣ ಖಾಲಿಯಾಗಿರುವುದರಿಂದ ರೈತರು ಪರದಾಡುವಂತಾಗಿದೆ.
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ಬಿತ್ತನೆ ಸೇರಿದಂತೆ ಕೃಷಿ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಆದರೆ ಇದೇ ಸಮಯದಲ್ಲಿ ಡೀಸೆಲ್ ಕೊರತೆ ಎದುರಾಗಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.
ಜನಸಂದಣಿ ಹೆಚ್ಚಾದ ಹಿನ್ನೆಲೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದರು. ಡೀಸೆಲ್ ಸರಬರಾಜು ಸಮರ್ಪಕವಾಗಿ ಮಾಡಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ.



