ಬೆಂಗಳೂರು: ಆರೋಪಿಗೆ ಒಮ್ಮೆ ನಿರೀಕ್ಷಣಾ ಜಾಮೀನು ಮಂಜೂರಾದ ಬಳಿಕ, ಅದು ಆರೋಪಪಟ್ಟಿ ಸಲ್ಲಿಕೆಯಾದ ನಂತರವೂ ಮುಂದುವರಿಯಲಿದೆ. ಜಾಮೀನು ರದ್ದುಗೊಳಿಸದೇ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ನಿರೀಕ್ಷಣಾ ಜಾಮೀನಿದ್ದರೂ ಬಂಧನಕ್ಕೆ ಆದೇಶಿಸಿದ್ದ ವಿಚಾರಣಾ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಿ ಆರೋಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಜಯ್ ಕುಮಾರ್ ಎ. ಪಾಟೀಲ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.
ಕ್ರಿಮಿನಲ್ ಪ್ರಕರಣದಲ್ಲಿ ಒಮ್ಮೆ ಮಂಜೂರಾದ ನಿರೀಕ್ಷಣಾ ಜಾಮೀನು ತನಿಖೆ ಪೂರ್ಣಗೊಂಡು ಆರೋಪಪಟ್ಟಿ ಸಲ್ಲಿಕೆಯಾದ ಬಳಿಕವೂ ಜಾರಿಯಲ್ಲೇ ಇರುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಅಲ್ಲದೇ, ಜಾಮೀನು ರದ್ದುಪಡಿಸುವಂತೆ ರಾಜ್ಯ ಸರ್ಕಾರ ಅಥವಾ ಸಂತ್ರಸ್ತೆಯ ಪರದಿಂದ ಯಾವುದೇ ಅರ್ಜಿ ಸಲ್ಲಿಸದೇ ಇದ್ದರೂ ಆರೋಪಿಯನ್ನು ವಶಕ್ಕೆ ಪಡೆಯುವಂತೆ ನಿರ್ದೇಶನ ನೀಡಿರುವ ವಿಚಾರಣಾ ನ್ಯಾಯಾಲಯದ ಕ್ರಮ ಕಾನೂನುಬಾಹಿರ ಎಂದು ಪೀಠ ಅಭಿಪ್ರಾಯಪಟ್ಟಿದೆ.
ಆರೋಪಿಗೆ ಈಗಾಗಲೇ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿರುವುದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಆದ್ದರಿಂದ ಜಾಮೀನು ರದ್ದುಪಡಿಸದೇ ಬಂಧನಕ್ಕೆ ಆದೇಶಿಸಿರುವುದು ಕಾನೂನಿಗೆ ವಿರುದ್ಧ ಎಂದು ನ್ಯಾಯಪೀಠ ತಿಳಿಸಿದೆ.
ಈ ವೇಳೆ ಡಾ. ರಾಜೇಶ್ ಪ್ರತಾಪ್ ಗಿರಿ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಹಾಗೂ ಸುಶೀಲಾ ಅಗರ್ವಾಲ್ ವಿರುದ್ಧ ದೆಹಲಿ ರಾಜ್ಯ ಸರ್ಕಾರ ಪ್ರಕರಣಗಳ ತೀರ್ಪುಗಳನ್ನು ಉಲ್ಲೇಖಿಸಿದ ಹೈಕೋರ್ಟ್, ಆರೋಪಪಟ್ಟಿ ಸಲ್ಲಿಕೆಯಾಗಿದೆ ಎಂಬ ಕಾರಣಕ್ಕೆ ಆರೋಪಿಯು ಶರಣಾಗಿ ನಿಯಮಿತ ಜಾಮೀನು ಪಡೆಯಬೇಕೆಂಬ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದೆ.
ಒಮ್ಮೆ ಮಂಜೂರಾದ ನಿರೀಕ್ಷಣಾ ಜಾಮೀನು ವಿಚಾರಣೆ ಪೂರ್ಣಗೊಳ್ಳುವವರೆಗೂ ಮುಂದುವರಿಯಬಹುದು ಎಂದು ನ್ಯಾಯಪೀಠ ಹೇಳಿದೆ.
ಈ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯದ ಬಂಧನ ಆದೇಶವನ್ನು ರದ್ದುಪಡಿಸಿ ಆರೋಪಿಯನ್ನು ಬಿಡುಗಡೆ ಮಾಡಲು ಹೈಕೋರ್ಟ್ ಸೂಚಿಸಿದೆ. ಜೊತೆಗೆ, ನಿಯಮಿತ ಜಾಮೀನು ಅರ್ಜಿಯನ್ನು ಕಾನೂನು ಪ್ರಕಾರ ಮರುಪರಿಶೀಲಿಸುವಂತೆ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ:
ಅರ್ಜಿದಾರ ಆರೋಪಿಯ ವಿರುದ್ಧ ಅಪ್ರಾಪ್ತೆಯ ಮೇಲಿನ ಲೈಂಗಿಕ ಕಿರುಕುಳ ಆರೋಪದಡಿ ಫೋಕ್ಸೋ ಕಾಯ್ದೆಯ ಸೆಕ್ಷನ್ 12 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 78(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಉತ್ತರ ಕನ್ನಡ ಜಿಲ್ಲೆಯ ಕಾರವಾರದ ವಿಶೇಷ ನ್ಯಾಯಾಲಯವು 2026ರ ಫೆಬ್ರವರಿ 26ರಂದು ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಬಳಿಕ ತನಿಖಾಧಿಕಾರಿಗಳು ಆರೋಪಪಟ್ಟಿ ಸಲ್ಲಿಸಿದ್ದರು.
ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಂತ್ರಸ್ತೆಯ ತಾಯಿ, ಆರೋಪಿ ಸಂತ್ರಸ್ತೆಯನ್ನು ಹಿಂಬಾಲಿಸುತ್ತಿದ್ದಾನೆ ಎಂದು ಮೌಖಿಕವಾಗಿ ಆರೋಪಿಸಿದ್ದರು. ಇದನ್ನು ಆರೋಪಿ ನಿರಾಕರಿಸಿದ್ದರೂ ವಿಶೇಷ ನ್ಯಾಯಾಲಯ ಬಂಧನಕ್ಕೆ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಆರೋಪಿ ಹೈಕೋರ್ಟ್ ಮೊರೆ ಹೋಗಿದ್ದರು.



