ಕೋಲಾರ: ಜೀವಂತ ವ್ಯಕ್ತಿಗಳಿಗೆ ಮರಣ ಪ್ರಮಾಣ ಪತ್ರ ನೀಡಿರುವುದು ಸೇರಿದಂತೆ ಜನನ–ಮರಣ ದಾಖಲೆಗಳಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೋಲಾರ ನಗರಸಭೆ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು.
ನಗರಸಭೆಯ ಆರೋಗ್ಯ ವಿಭಾಗದಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ ಅಧಿಕಾರಿಗಳು, ಒಂದೇ ನೋಂದಣಿಯಲ್ಲಿ ಇಬ್ಬರು ಮಕ್ಕಳಿಗೆ ಜನನ ಪ್ರಮಾಣ ಪತ್ರ ನೀಡಿರುವುದು ಹಾಗೂ ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರಗಳಲ್ಲಿ ಜನನವಾಗದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ಜನನ ಪ್ರಮಾಣ ಪತ್ರ ವಿತರಿಸಿರುವ ಗಂಭೀರ ಆರೋಪಗಳ ಕುರಿತು ತನಿಖೆ ಆರಂಭಿಸಿದ್ದಾರೆ.
ಸಾರ್ವಜನಿಕರಿಂದ ನಿರಂತರವಾಗಿ ದೂರುಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕೋಲಾರ ಲೋಕಾಯುಕ್ತ ಎಸ್ಪಿ ಆಂಥೋಣಿ ಜಾನ್ ಸೂಚನೆ ಮೇರೆಗೆ ಇನ್ಸ್ಪೆಕ್ಟರ್ ಆಂಜಿನಪ್ಪ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು.



