ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ರಾಂಗ್ ಸೈಡ್‌ನಲ್ಲಿ ಅತಿವೇಗವಾಗಿ ಬಂದ ಗೂಡ್ಸ್ ಆಟೋ ಬೈಕ್‌ಗೆ ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತರನ್ನು ಬೊಮ್ಮನಾಳ ಗ್ರಾಮದ ನಿವಾಸಿಗಳಾದ ಮಹಾಂತೇಶ್ ಮಾನೆ (27), ಅವರ ಪತ್ನಿ ಸಾಕ್ಷಿ ಮಾನೆ (23) ಹಾಗೂ ಅವರ 9 ತಿಂಗಳ ಮಗು ಸಮರ್ಥ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಹಾಂತೇಶ್ ಮಾನೆ ತಮ್ಮ ಕುಟುಂಬದೊಂದಿಗೆ ಬೊಮ್ಮನಾಳ ಗ್ರಾಮದಿಂದ ರಾಯಬಾಗ ಪಟ್ಟಣದತ್ತ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಈ ವೇಳೆ ಎದುರಿನಿಂದ ರಾಂಗ್ ಸೈಡ್‌ನಲ್ಲಿ ವೇಗವಾಗಿ ಬಂದ ಗೂಡ್ಸ್ ಆಟೋ ಬೈಕ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ದಂಪತಿ ಹಾಗೂ ಮಗು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಅಪಘಾತದ ನಂತರ ಗೂಡ್ಸ್ ಆಟೋ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಮಾಹಿತಿ ದೊರಕುತ್ತಿದ್ದಂತೆಯೇ ರಾಯಬಾಗ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆಟೋ ಚಾಲಕನಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ಒಂದೇ ಕುಟುಂಬದ ಮೂವರು ಮೃತಪಟ್ಟ ಹಿನ್ನೆಲೆಯಲ್ಲಿ ಬೊಮ್ಮನಾಳ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ.



