ಉನ್ನಾವೋ: ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ. 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ.
ಔರಾಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬಸ್ ಸಂಪೂರ್ಣ ಜಖಂಗೊಂಡಿದ್ದು, ಸ್ಥಳದಲ್ಲೇ ಹಲವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಮಾಹಿತಿ ತಿಳಿದ ತಕ್ಷಣವೇ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.
ಮೃತರಲ್ಲಿ ಸಬ್ ಇನ್ಸ್ಪೆಕ್ಟರ್ ರಾಮಚಂದ್ರ ಮತ್ತು ಕೈದಿ ಛತ್ರಪಾಲ್ ಕೂಡ ಸೇರಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಇಬ್ಬರೂ ಸಿವಾನ್ನಿಂದ ದೆಹಲಿಗೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ತಕ್ಷಣ ಲಕ್ನೋದ ಟ್ರಾಮಾ ಸೆಂಟರ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ವೇಗವಾಗಿ ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



