ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಸ್ಥಾನ ಕುರಿತ ಚರ್ಚೆಗಳು ಜೋರಾಗಿರುವ ನಡುವೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಳೆಯ ಹುಲಿ. ಯಾವಾಗ ಯಾವ ರೀತಿಯ ರಾಜಕೀಯ ಆಟ ಆಡುತ್ತಾರೆ ಎಂಬುದು ಯಾರಿಗೂ ಗೊತ್ತಾಗುವುದಿಲ್ಲ ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೆ ಮುಖ್ಯಮಂತ್ರಿ ಬದಲಾವಣೆ ಕುರಿತ ಯಾವುದೇ ಚರ್ಚೆಗೆ ಖಚಿತತೆ ಇಲ್ಲ ಎಂದು ಅವರು ಹೇಳಿದರು. ಮೂರು ವರ್ಷದ ಸರ್ಕಾರದಲ್ಲಿ ಎರಡು ವರ್ಷಕ್ಕಿಂತ ಹೆಚ್ಚು ಕಾಲ ಮುಖ್ಯಮಂತ್ರಿ ಬದಲಾವಣೆ ವಿಚಾರವೇ ಕಾಂಗ್ರೆಸ್‌ನಲ್ಲಿ ಚರ್ಚೆಯಾಗುತ್ತಿದೆ. ಜನರ ಸಮಸ್ಯೆಗಳಿಗಿಂತ ಖುರ್ಚಿ ರಾಜಕೀಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಒಂದು ಕಡೆ ಬರಗಾಲ, ಮತ್ತೊಂದು ಕಡೆ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದ ಸಮಸ್ಯೆಗಳು ಉಂಟಾಗುತ್ತಿವೆ. ಗಾರ್ಬೇಜ್ ಹಗರಣದಂತಹ ವಿಚಾರಗಳು ಚರ್ಚೆಗೆ ಗ್ರಾಸವಾಗಿವೆ. ಆದರೆ ಇವೆಲ್ಲವನ್ನು ಬಿಟ್ಟು ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ಪರಸ್ಪರ ಹೋರಾಟ ನಡೆಸುತ್ತಿದ್ದಾರೆ ಎಂದು ಶೋಭಾ ಕರಂದ್ಲಾಜೆ ಕಿಡಿಕಾರಿದರು.
ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಯತ್ನಿಸುತ್ತಿದ್ದರೆ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲು ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ರಾಜ್ಯದ ಜನರ ಸಮಸ್ಯೆಗಳು ಕಡೆಗಣನೆಯಾಗುತ್ತಿವೆ ಎಂದು ಅವರು ಆರೋಪಿಸಿದರು.
ಯಾವುದೇ ಸಚಿವರು ಜಿಲ್ಲೆಗಳ ಪ್ರವಾಸ ಮಾಡುತ್ತಿಲ್ಲ. ಅಭಿವೃದ್ಧಿ ಕಾಮಗಾರಿಗಳಿಗೆ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಕೆಲಸ ಮಾಡಲು ಕಾಂಗ್ರೆಸ್‌ಗೆ 135 ಸ್ಥಾನಗಳನ್ನು ನೀಡಿದ್ದಾರೆ. ಆದ್ದರಿಂದ ಅಧಿಕಾರದ ರಾಜಕೀಯ ಬಿಟ್ಟು ಜನರ ಪರ ಕೆಲಸ ಮಾಡಬೇಕು ಎಂದು ಶೋಭಾ ಕರಂದ್ಲಾಜೆ ಸರ್ಕಾರಕ್ಕೆ ತಿರುಗೇಟು ನೀಡಿದರು.



