ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಘೋಷಿಸಿದ ವೇಳೆ ಸಚಿವ ಸಂಪುಟದ ಆಪ್ತ ಸದಸ್ಯರು ಭಾವುಕರಾದ ಘಟನೆ ನಡೆದಿದೆ. ಸಚಿವ ಸಂತೋಷ್ ಲಾಡ್ ಸೇರಿದಂತೆ ಕೆಲ ಸಚಿವರು ಸಭೆಯಲ್ಲೇ ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ.
ರಾಜೀನಾಮೆ ಘೋಷಣೆಗೆ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಆಪ್ತ ಸಚಿವರು ಹಾಗೂ ಶಾಸಕರೊಂದಿಗೆ ಬ್ರೇಕ್ಫಾಸ್ಟ್ ಸಭೆ ನಡೆಸಿದರು. ಈ ವೇಳೆ ತಮ್ಮ ರಾಜೀನಾಮೆ ನಿರ್ಧಾರವನ್ನು ಅಧಿಕೃತವಾಗಿ ತಿಳಿಸಿದರು.
ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮುಂದಿನ ಮುಖ್ಯಮಂತ್ರಿ ಆಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿ, ಅವರಿಗೆ ಎಲ್ಲರೂ ಸಹಕಾರ ನೀಡುವಂತೆ ಸಚಿವರಲ್ಲಿ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ರಾಜೀನಾಮೆ ಘೋಷಣೆ ಕೇಳುತ್ತಿದ್ದಂತೆಯೇ ಸಭೆಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದ್ದು, ಸಚಿವ ಸಂತೋಷ್ ಲಾಡ್ ಸೇರಿದಂತೆ ಹಲವು ಆಪ್ತರು ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸಭೆಯ ಬಳಿಕ ಸಚಿವರು ಒಬ್ಬೊಬ್ಬರಾಗಿ ಹೊರಬಂದಾಗ ಅವರ ಮುಖದಲ್ಲಿ ಬೇಸರದ ಭಾವ ಸ್ಪಷ್ಟವಾಗಿ ಕಂಡುಬಂತು. ಆದರೆ ಮಾಧ್ಯಮಗಳು ಪ್ರಶ್ನೆ ಕೇಳಿದರೂ ಯಾವುದೇ ಸಚಿವರು ಸಿಎಂ ರಾಜೀನಾಮೆ ಕುರಿತು ಪ್ರತಿಕ್ರಿಯೆ ನೀಡಲು ಮುಂದಾಗಲಿಲ್ಲ.



