ಬಳ್ಳಾರಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಡೆದರೂ ಉತ್ತಮ ಆಡಳಿತ ಸಿಗುತ್ತದೆ ಎನ್ನುವ ವಿಶ್ವಾಸ ಜನರಲ್ಲಿ ಉಳಿದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಒಳಗಿನ ಗೊಂದಲ ರಾಜ್ಯ ಆಡಳಿತದ ಮೇಲೆ ಪರಿಣಾಮ ಬೀರಿದೆ ಎಂದು ಆರೋಪಿಸಿದರು.
ಮುಖ್ಯಮಂತ್ರಿಗಳು ರಾಜ್ಯಪಾಲರ ಭೇಟಿಗೆ ಅನುಮತಿ ಕೇಳಿದರೆ ಅದು ಮುಖ್ಯಮಂತ್ರಿಗಳ ಟಿಪ್ಪಣಿಯಲ್ಲೇ ಇರುತ್ತದೆ. ಸಿಎಂ ಬದಲಾವಣೆ ವಿಚಾರವನ್ನು ಬಿಜೆಪಿ ಯಾವುದೇ ರೀತಿಯಲ್ಲಿ ಬಳಸಿಕೊಳ್ಳುವುದಿಲ್ಲ,” ಎಂದು ಅವರು ಸ್ಪಷ್ಟಪಡಿಸಿದರು.
ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ನೀಡಿ ಸ್ಥಿರ ಸರ್ಕಾರ ರಚಿಸಲು ಅವಕಾಶ ನೀಡಿದ್ದಾರೆ. ಹೀಗಾಗಿ ಈ ವಿಚಾರದಲ್ಲಿ ಬಿಜೆಪಿ ಯಾವುದೇ ರೀತಿಯ ರಾಜಕೀಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ವಿಜಯೇಂದ್ರ ಹೇಳಿದರು.
ಆದರೆ ಕಾಂಗ್ರೆಸ್ ಪಕ್ಷದ ಆಂತರಿಕ ಗೊಂದಲ ಬೇಗ ಅಂತ್ಯಗೊಳ್ಳುವ ಲಕ್ಷಣ ಕಾಣುತ್ತಿಲ್ಲ ಎಂದು ಟೀಕಿಸಿದ ಅವರು, ಕಳೆದ ಒಂದು ವರ್ಷದಿಂದ ಕಾಂಗ್ರೆಸ್‌ನ ಒಳಕಚ್ಚಾಟದಿಂದ ರಾಜ್ಯದ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದರು.
ಕಳೆದ ಎರಡು-ಮೂರು ದಿನಗಳಿಂದ ನಡೆದಿರುವ ರಾಜಕೀಯ ಬೆಳವಣಿಗೆಗಳು ರಾಜ್ಯದಲ್ಲಿ ಅನಿಶ್ಚಿತ ವಾತಾವರಣ ನಿರ್ಮಾಣ ಮಾಡಿವೆ. ಮುಖ್ಯಮಂತ್ರಿ ರಾಜೀನಾಮೆ ಕುರಿತು ನಡೆಯುತ್ತಿರುವ ಚರ್ಚೆಗಳು ಜನರಲ್ಲಿ ಗೊಂದಲ ಸೃಷ್ಟಿಸಿವೆ ಎಂದು ಹೇಳಿದರು.



