ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ.
ನಿನ್ನೆ ನಡೆದ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಘೋಷಿಸಿದ್ದರು. ಇದೀಗ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ನಿನ್ನೆ ಬೆಳಗ್ಗೆ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಉಪಹಾರ ಕೂಟ ನಡೆಸಿ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದರು. ನಂತರ ಅವರು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ಅಧಿಕೃತ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು.
ರಾಜ್ಯಪಾಲ ಗೆಹ್ಲೋಟ್ ಅವರು ತಮ್ಮ ಸಂವಿಧಾನಾತ್ಮಕ ಅಧಿಕಾರವನ್ನು ಬಳಸಿಕೊಂಡು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.



