ಬೆಂಗಳೂರು/ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು.
ರಾಜೀನಾಮೆ ಬಳಿಕ ದೆಹಲಿಗೆ ತೆರಳಿದ ಸಿದ್ದರಾಮಯ್ಯ ಅವರು ಮೊದಲಿಗೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದರು.
ದೆಹಲಿಯಲ್ಲಿ ಇಂದು ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ.
ಶಾಸಕರುಗಳಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ|| ಯತೀಂದ್ರ ಸಿದ್ದರಾಮಯ್ಯ ಅವರು ಈ ವೇಳೆ ನನ್ನೊಂದಿಗಿದ್ದರು. pic.twitter.com/3yy5DrAzcO
— Siddaramaiah (@siddaramaiah) May 29, 2026
ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, “ಸಿದ್ದರಾಮಯ್ಯ ಅವರು ಇಂದು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಇದು ಆತ್ಮೀಯ ಹಾಗೂ ಸೌಹಾರ್ದಯುತ ಭೇಟಿ ಆಗಿತ್ತು. ಹಲವು ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಯಿತು” ಎಂದು ತಿಳಿಸಿದರು.
ಅದಾದ ಬಳಿಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಕೆಲಕಾಲ ಮಹತ್ವದ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ, ಶಾಸಕರಾದ ಪ್ರಿಯಾಂಕ್ ಖರ್ಗೆ, ಕೆ.ಜೆ. ಜಾರ್ಜ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, “ಇಂದು ದೆಹಲಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದೆ. ಈ ವೇಳೆ ಕೆ.ಜೆ. ಜಾರ್ಜ್, ಪ್ರಿಯಾಂಕ್ ಖರ್ಗೆ ಹಾಗೂ ಡಾ. ಯತೀಂದ್ರ ಸಿದ್ದರಾಮಯ್ಯ ನನ್ನೊಂದಿಗಿದ್ದರು” ಎಂದು ತಿಳಿಸಿದ್ದಾರೆ.



