ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸುರಿದ ಧಾರಾಕಾರ ಮಳೆ ಒಂದೆಡೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದರೆ, ಮತ್ತೊಂದೆಡೆ ಅದೇ ಮಳೆಯ ನಡುವೆ ಬೆಂಗಳೂರು ಪೊಲೀಸರ ಮಾನವೀಯ ಮುಖ ಬೆಳಕಿಗೆ ಬಂದಿದೆ.
ಮಳೆಯಿಂದಾಗಿ ಜಲಾವೃತಗೊಂಡ ರಸ್ತೆಯಲ್ಲಿ ರಸ್ತೆ ದಾಟಲು ಅಸಹಾಯಕನಾಗಿದ್ದ ವಿಕಲಚೇತನ ಯುವಕನನ್ನು ಬ್ಯಾಟರಾಯನಪುರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಅನಿಲ್ ಅವರು ತಮ್ಮ ಹೆಗಲ ಮೇಲೆ ಹೊತ್ತು ಸುರಕ್ಷಿತವಾಗಿ ರಸ್ತೆ ದಾಟಿಸುವ ಮೂಲಕ ಮಾನವೀಯತೆಯ ನಿದರ್ಶನ ನೀಡಿದ್ದಾರೆ.
ನಗರದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿದ್ದು, ಸಾರ್ವಜನಿಕ ಸಂಚಾರಕ್ಕೂ ತೊಂದರೆ ಉಂಟಾಗಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ಮಾನವೀಯ ನಡೆ ಸ್ಥಳೀಯರ ಗಮನ ಸೆಳೆದಿದ್ದು, ಅನಿಲ್ ಅವರ ಸೇವಾ ಮನೋಭಾವಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.



